ಬೆಂಗಳೂರು: ‘ಬಿಟ್ ಕಾಯಿನ್ ಹಗರಣದ ತನಿಖೆಯನ್ನು ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ವಹಿಸಲಾಗಿದೆ. ಈ ಸಂಬಂಧದ ದಾಖಲೆಗಳನ್ನು ಶೀಘ್ರವೇ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.
ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಹಾಗೂ ಕಾನೂನು ಪ್ರಕ್ರಿಯೆ ರದ್ದುಗೊಳಿಸಬೇಕು ಎಂದು ಕೋರಿ ಆರೋಪಿಗಳಾದ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿ, ಸಹ ಆರೋಪಿಗಳಾದ ಸುನೀಶ್ ಹೆಗ್ಡೆ, ಪ್ರಸಿದ್ಧ ಶೆಟ್ಟಿ ಹಾಗೂ ಹೇಮಂತ್ ಮುದ್ದಪ್ಪ ಪ್ರತ್ಯೇಕವಾಗಿ ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಮೂರ್ತಿ ಹೇಮಂತ್ ಚಂದನ್‌ಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರಾದ ಸಿ.ಎಚ್.ಹನುಮಂತರಾಯ ಮತ್ತು ಸಂದೇಶ್ ಚೌಟ ಅವರು, ‘ಅರ್ಜಿದಾರರ ವಿರುದ್ಧ ತುಮಕೂರು, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ಸಿಸಿಬಿಯಲ್ಲಿ ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿರುವುದು ಕಾನೂನಿಗೆ ವಿರುದ್ಧವಾಗಿವೆ’ ಎಂದು ಪ್ರತಿಪಾದಿಸಿದರು.
ಏತನ್ಮಧ್ಯೆ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, ‘ಈಗಾಗಲೇ ಬಿಟ್ ಕಾಯಿನ್ ಹಗರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಲಾಗಿದೆ. ಮುಂದಿನ ವಿಚಾರಣೆ ವೇಳೆಗೆ ತನಿಖೆಯ ವರದಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು. ಹೀಗಾಗಿ, ಅರ್ಜಿ ವಿಚಾರಣೆ ಮುಂದೂಡಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಇದೇ 22ಕ್ಕೆ ಮುಂದೂಡಿತು.