ಅಗರ್ತಲಾ: ತ್ರಿಪುರಾ ಅಸೆಂಬ್ಲಿಗೆ ನಡೆದ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಾಣಿಕ್ ಸಾಹಾ ಅವರು ಬರ್ದೋವಾಲಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.
ಒಟ್ಟು 4 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 1 ಸ್ಥಾನಕ್ಕೆ ತೃಪ್ತಿಪಟ್ಟರೆ, ಇನ್ನುಳಿದ 3 ಸ್ಥಾನಗಳನ್ನು ಬಿಜೆಪಿ ಗೆದ್ದಿದೆ. ಮುಖ್ಯಮಂತ್ರಿ ಮಾಣಿಕ್ ಸಾಹಾ ಅವರು ಸುಮಾರು 6 ಸಾವಿರ ಮತಗಳ ಅಂತರಗಳಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ತನ್ನ ಕುರ್ಚಿಯನ್ನು ಭದ್ರಪಡಿಸಿಕೊಂಡಿದ್ದಾರೆ.
ತ್ರಿಪುರಾದ ಅಗರ್ತಲಾ, ಜುಬಾರಾಜ್’ನಗರ, ಸುರ್ಮಾ ಮತ್ತು ಬರ್ದೋವಾಲಿ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಸಾಹಾ ಅವರು ಬರ್ದೋವಾಲಿ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. ಅಲ್ಲದೆ ಮುಖ್ಯಮಂತ್ರಿಯಾಗಿ ಮುಂದುವರಿಯಲು ಈ ಗೆಲುವು ಅನಿವಾರ್ಯವಾಗಿತ್ತು. 4 ಸ್ಥಾನಗಳಲ್ಲಿ ಬಿಜೆಪಿ ಮೂರು ಸ್ಥಾನಗಳನ್ನು ಪಡೆದರೆ, ಕಾಂಗ್ರೆಸ್ ಅಗರ್ತಲಾ ಕ್ಷೇತ್ರವನ್ನು ವಶಪಡಿಸಿಕೊಂಡಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ವಿಪ್ಲವ್ ದೇವ್ ಅವರು ಕಳೆದ ತಿಂಗಳು ತ್ರಿಪುರಾ ಮುಖ್ಯಮಂತ್ರಿ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದರಿಂದ ರಾಜ್ಯಸಭಾ ಸದಸ್ಯ ಮಾಣಿಕ್ ಸಾಹಾ ಅವರು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು.