ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವೈಫಲ್ಯ ಆರೋಪ: ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು

Prasthutha|

ಬೆಂಗಳೂರು: ರಾಜ್ಯದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗಿರುವುದು ಮತ್ತು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ವಿಚಾರವಾಗಿ ಬಿಜೆಪಿ ನಿಯೋಗ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದು, ತಕ್ಷಣವೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

- Advertisement -

ಮಾಜಿ ಸಿಎಂ ಡಿವಿ ಸದಾನಂದ ಗೌಡ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ. ಶಾಸಕ ಸಿಕೆ ರಾಮಮೂರ್ತಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ ನಿಯೋಗದಲ್ಲಿದ್ದರು. ಕರ್ನಾಟಕ ರಾಜ್ಯದ ಕಾನೂನು ಸುವ್ಯವಸ್ಥೆ ತೀರಾ ಹದಗೆಟ್ಟಿರುವುದು ತಮಗೂ ತಿಳಿದಿದೆ. ಹಿಂದೆ ರಾಜ್ಯವು ಕಾನೂನು- ಸುವ್ಯವಸ್ಥೆ ವಿಚಾರದಲ್ಲಿ ಉತ್ತಮ ಹೆಸರು ಪಡೆದಿತ್ತು.

ಅಪರಾಧಗಳನ್ನು ಕನಿಷ್ಠ ಪ್ರಮಾಣದಲ್ಲಿ ಇಡುವ ನಿಟ್ಟಿನಲ್ಲಿ ಪ್ರಸಿದ್ಧಿ ಪಡೆದಿತ್ತು. ಆದರೆ, ಇದೀಗ ಮಹಿಳೆಯರ ಮೇಲಿನ ದೌರ್ಜನ್ಯ, ಕೊಲೆ, ಸುಲಿಗೆಗಳು ಹಾಗೂ ಬಡವರು, ಶೋಷಿತರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ. ಕರ್ನಾಟಕವು ಈ ಮೂಲಕ “ಅಪರಾಧಗಳ ರಾಜ್ಯ” ಎಂಬ ಕೆಟ್ಟ ಹೆಸರು ಪಡೆಯುವಂತಾಗಿದೆ ಎಂದು ಮನವಿ ಪತ್ರದಲ್ಲಿ ಬಿಜೆಪಿ ಉಲ್ಲೇಖಿಸಿದೆ.



Join Whatsapp