ಕಾಂಗ್ರೆಸ್ ಸರ್ಕಾರ ಪತನಗೊಳಿಸುವಷ್ಟು ಬಲ ಬಿಜೆಪಿಗಿಲ್ಲ: ಕೆಸಿ ವೇಣುಗೋಪಾಲ್

Prasthutha|

►‘ತಮ್ಮ ಮಕ್ಕಳನ್ನು ಉಳಿಸಿಕೊಳ್ಳಲು ಸಿದ್ದರಾಮಯ್ಯ ವಿರುದ್ಧ ಪಿತೂರಿ’

- Advertisement -

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಷಡ್ಯಂತ್ರಕ್ಕೆ ನಾವು ಮಣಿಯುವುದಿಲ್ಲ. ಜನರ ಬಳಿಗೆ ಹೋಗಿ ವಾಸ್ತವವನ್ನು ವಿವರಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಭಾನುವಾರ ಹೇಳಿದರು.


ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ವಿರುದ್ಧ ಹರಿಹಾಯ್ದರು.
ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಗಂಭೀರ ಬೆಳವಣಿಗೆಗಳ ಕುರಿತು ರಾಜ್ಯದ ಸಚಿವರೊಂದಿಗೆ ಚರ್ಚಿಸಲಾಯಿತು. ಕರ್ನಾಟಕ ರಾಜ್ಯ ಬಿಜೆಪಿಯು ಸರ್ಕಾರಗಳನ್ನು ಉರುಳಿಸುವ ಇತಿಹಾಸವನ್ನು ಹೊಂದಿದೆ.

- Advertisement -


ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರದ ಬೆಂಬಲಕ್ಕೆ ಬರುತ್ತಿಲ್ಲ. ಬಜೆಟ್ನಲ್ಲಿ ರಾಜ್ಯದ ವಿರುದ್ಧ ತಾರತಮ್ಯ ಮಾಡಿದೆ, ಮತ್ತೊಂದೆಡೆ, ಹಿಂದಿನಂತೆ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನ ನಡೆಸುತ್ತಿದ್ದಾರೆ, ಆದರೆ, ಈಗ ಸಮಯ ಬದಲಾಗಿದೆ. ಕೇಂದ್ರ ಸರ್ಕಾರ ಮೊದಲಿನಷ್ಟು ಬಲಿಷ್ಠವಾಗಿಲ್ಲ ಎಂಬುದು ಅವರಿಗೆ ಗೊತ್ತಿಲ್ಲ. ನಮಗೆ ವಿಶ್ವಾಸವಿದೆ, ಪಕ್ಷದಲ್ಲಿ ವಿಶ್ವಾಸವಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ. ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನಗಳನ್ನು ರಾಜ್ಯದ ಜನತೆಗೆ ವಿವರಿಸಲಾಗುವುದು ಎಂದು ಹೇಳಿದರು.


ಬಿಜೆಪಿ ಮತ್ತು ಜೆಡಿಎಸ್ ಪ್ರಮುಖ ನಾಯಕರು ತಮ್ಮ ಮಕ್ಕಳನ್ನು ರಾಜಕೀಯವಾಗಿ ಉಳಿಸಲು ಬಹುಮತದಿಂದ ಆಯ್ಕೆಯಾದ ಕಾಂಗ್ರೆಸ್ ಸರ್ಕಾರ ಉರುಳಿಸಲು ಪಿತೂರಿ ನಡೆಸುತ್ತಿದ್ದಾರೆ ಎಂದರು.
“ಪ್ರಜ್ವಲ್ ರೇವಣ್ಣ ಪ್ರಕರಣ ಹಾಗೂ ಹಲವಾರು ಪ್ರಕರಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ಪಿತೂರಿಯನ್ನು ದೇಶದ ಜನ ಗಮನಿಸಿದ್ದಾರೆ. ನಾವು ಜನರಿಗೆ ವಾಸ್ತವಾಂಶ ವಿವರಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡುತ್ತೇವೆ” ಎಂದು ಹೇಳಿದರು.

“ಈ ಹಿಂದೆ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸಿದ್ದ ಬಿಜೆಪಿ ಈಗಲೂ ಅದೇ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿಕೊಂಡಿದೆ. ಈ ಎಲ್ಲಾ ಬೆಳವಣಿಗೆಗಳ ಕುರಿತು ರಾಜ್ಯದ ಸಚಿವರೊಂದಿಗೆ ಚರ್ಚಿಸಲಾಗಿದೆ” ಎಂದು ಹೇಳಿದರು.
“2023ರ ವಿಧಾನಸಭೆ ಚುನಾವಣೆ ಉಳ್ಳವರ ಮತ್ತು ಇಲ್ಲದವರು ನಡುವಿನ ಹೋರಾಟವಾಗಿತ್ತು. ಈ ಹೋರಾಟದಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಗೆದ್ದು. ಬಹುಮತ ಪಡೆದು ಸರ್ಕಾರ ರಚಿಸಿದೆ. ಬಹುಮತ ಪಡೆದ ಸರ್ಕಾರವನ್ನೇ ಬೀಳಿಸಲು ಕುತಂತ್ರದಿಂದ ಹೊರಟಿದ್ದಾರೆ” ಎಂದು ಕಿಡಿಕಾರಿದರು.

“ಸಿದ್ದರಾಮಯ್ಯ ಅವರ ಪ್ರಾಮಾಣಿಕತೆಯ ಬಗ್ಗೆ ಇಡೀ ರಾಜ್ಯದ ಜನರಿಗೆ ತಿಳಿದಿದೆ. ಅವರು ಸಿಎಂ ಸ್ಥಾನಕ್ಕೆ ಹೊಸಬರೇನಲ್ಲ. ಅವರ ರಾಜಕೀಯ ಪ್ರಯಾಣದ ಬಗ್ಗೆ ರಾಜ್ಯದ ಪ್ರತಿಯೊಬ್ಬರು ತಿಳಿದಿದ್ದಾರೆ. ಅವರ ಆರಂಭದ ದಿನಗಳು ಹಾಗೂ ಈಗ ಅವರ ಬೆಳವಣಿಗೆಯನ್ನು ನೋಡಿದ್ದಾರೆ” ಎಂದರು.



Join Whatsapp