ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯದ ರಾಜಕೀಯದಲ್ಲಿ ಚರ್ಚೆಗೊಳಗಾಗಿದ್ದ ಬಿಜೆಪಿ-ಜೆಡಿಎಸ್ ಮೈತ್ರಿಗೆ ಅಧಿಕೃತ ಮುದ್ರೆ ಬಿದ್ದಿದೆ.
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಎನ್‌ಡಿಎ ಮೈತ್ರಿ ಕೂಟಕ್ಕೆ ಸೇರ್ಪಡೆಯಾಗಿದೆ. ಇದರಿಂದ ಜೆಡಿಎಸ್ ಪಕ್ಷಕ್ಕೆ ಸಂಕಷ್ಟವೊಂದು ಎದುರಾಗಿದೆ.
ಜೆಡಿಎಸ್‌ನಿಂದ ದೂರ ಉಳಿಯಲು ಮುಸ್ಲಿಂ ಮುಖಂಡರು ನಿರ್ಧರಿಸಿದ್ದಾರೆ. ಜೆಡಿಎಸ್ ರಾಜ್ಯ ಉಪಾಧ್ಯಕ್ಷ, ರಾಜ್ಯ ಕಚೇರಿ ಉಸ್ತುವಾರಿ ಸೈಯದ್ ಶಫಿಉಲ್ಲ ಸಾಹೇಬ್, ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರಿಗೆ ತಮ್ಮ ರಾಜೀನಾಮೆ ಪತ್ರ ನೀಡಿದ್ದಾರೆ. ಶಫಿಉಲ್ಲ ರಾಜೀನಾಮೆ ಸಲ್ಲಿಕೆ ಬೆನ್ನಲ್ಲೇ ಮುಸ್ಲಿಂ ಮುಖಂಡರು ಸಭೆ ನಡೆಸಿದ್ದು, ಪಕ್ಷ ತೊರೆಯಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಐದು ಕ್ಷೇತ್ರಗಳಿಗೆ ಜೆಡಿಎಸ್ ಒಲವು
ಮೈತ್ರಿ ಬಳಿಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಜೆಡಿಎಸ್ ಪಕ್ಷವು ಐದು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಆಸಕ್ತಿ ತೋರಿದೆ. ಹಳೆ ಮೈಸೂರು ಭಾಗದ ಹಾಸನ, ಮಂಡ್ಯ, ಕೋಲಾರ, ತುಮಕೂರು ಲೋಕಸಭಾ ಕ್ಷೇತ್ರಗಳ ಜತೆಗೆ ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಕ್ಷೇತ್ರದ ಬಗ್ಗೆ ಆಸಕ್ತಿ ತೋರಿದೆ. ಈ ಬಗ್ಗೆ ಸಾಂಕೇತಿಕವಾಗಿ ಹೆಚ್.ಡಿ ಕುಮಾರಸ್ವಾಮಿ ಅವರು ಅಭಿಪ್ರಾಯವನ್ನೂ ಬಿಜೆಪಿ ವರಿಷ್ಠರ ಮುಂದಿಟ್ಟಿದ್ದಾರೆ ಎನ್ನಲಾಗಿದೆ.
ಆದರೆ, ಈ ಪೈಕಿ ಕೋಲಾರ, ತುಮಕೂರು ಹಾಗೂ ರಾಯಚೂರು ಕ್ಷೇತ್ರದಲ್ಲಿ ಬಿಜೆಪಿ ಹಾಲಿ ಸಂಸದರಿದ್ದಾರೆ. ಜತೆಗೆ ಮಂಡ್ಯ ಕ್ಷೇತ್ರದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರೂ ಈಗ ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ. ಹೀಗಾಗಿ, ಯಾವಕ್ಷೇತ್ರಗಳನ್ನು ಬಿಜೆಪಿಯು ಜೆಡಿಎಸ್ ಗೆ ಬಿಟ್ಟುಕೊಡಲು ಮುಂದಾಗಲಿದೆ ಎಂಬುದು ಕುತೂಹಲಕರವಾಗಿದೆ.