ಸಿ ಎಂ ಬೊಮ್ಮಾಯಿ ವಿರುದ್ಧ ಬಿಜೆಪಿ ಶಾಸಕ ಪ್ರೀತಮ್ ಗೌಡ ಅಸಮಾಧಾನ ಸ್ಫೋಟ!

Prasthutha|

ಹಾಸನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಎಂ ಆಗಿ ಅಧಿಕಾರ ಸ್ವೀಕರಿಸಿ 24 ಗಂಟೆಯೊಳಗೆ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಹೋಗಿ ಅವರ ಆಶೀರ್ವಾದ ಪಡೆದಿರುವುದು ಭಾರೀ ಅಸಮಾಧಾನ ತರಿಸಿದೆ ಎಂದು ಹಾಸನದ ಬಿಜೆಪಿ ಶಾಸಕ ಪ್ರೀತಮ್ ಗೌಡ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ.

- Advertisement -

ನಾವು ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ವಿರೋಧಿಯಾಗಿ ರಾಜಕಾರಣ ಮಾಡುತ್ತಿದ್ದೇವೆ. ಈ ಭಾಗಕ್ಕೆ ಸಚಿವ ಸ್ಥಾನ ಕೊಡದಿದ್ದರೂ ಪರವಾಗಿಲ್ಲ, ಕನಿಷ್ಠ ಇಲ್ಲಿನ ಬಿಜೆಪಿ ಕಾರ್ಯಕರ್ತರಿಗೆ ಮಾನಸಿಕ ಸ್ಥೈರ್ಯ ತುಂಬೋ ‌ಕೆಲಸ ಮಾಡಬೇಕು. ಬಸವರಾಜ ಬೊಮ್ಮಾಯಿಯವರು ಸಿಎಮ್ ಆಗಿ 24 ಗಂಟೆ ಒಳಗೆ ದೇವೇಗೌಡರ ಮನೆಗೆ ಹೋಗೋ ಆವಶ್ಯಕತೆ ಏನಿತ್ತು ಎಂದು ಕಾರ್ಯಕರ್ತರು ನನ್ನ ಪ್ರಶ್ನೆ ಮಾಡುತ್ತಿದ್ದಾರೆ. ಈ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ನಾನು ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷರು ಹಾಗೂ ಸಂಘ ಪರಿವಾರದ ಜೊತೆಯೂ ನಾನು ಚರ್ಚೆ ಮಾಡುತ್ತೇನೆ.

ಮುಂದೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಇದೆ. ಆ ಚುನಾವಣೆ ಕಾರ್ಯಕರ್ತರ ಚುನಾವಣೆಯೆಂಬುದು ಎಲ್ಲರಿಗೂ ಗೊತ್ತಿದೆ. ನಾವು ಜನತಾದಳದ ವಿರುದ್ಧವೇ ಚುನಾವಣೆ ಮಾಡಬೇಕು. ಅದನ್ನು ಮಾಡಬೇಕಾದರೆ ರಾಜಕೀಯದ ಹೇಳಿಕೆ ಕೊಡಬೇಕು. ಈಗಿನ ನಾಯಕರು ಆ ರೀತಿಯ ರಾಜಕೀಯ ಹೇಳಿಕೆಗಳನ್ನು ಕೊಡುತ್ತಾರೋ ಇಲ್ಲವೋ ಎಂಬ ಅನುಮಾನ ಕಾರ್ಯಕರ್ತರನ್ನು ಕಾಡುತ್ತಿದೆ. ನಾನು ಬಿಜೆಪಿ ಕಾರ್ಯಕರ್ತರ ನೋವಿಗೆ ಸ್ಪಂದಿಸೋ ಕೆಲಸ ಮಾಡುತ್ತೇನೆ. ಆದರೆ, ಯಾವುದೇ ಕಾರಣಕ್ಕೂ ನಮ್ಮ ಎದುರಾಳಿಯಾದ ಜೆಡಿಎಸ್ ಅವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಆವಶ್ಯಕತೆ ಇಲ್ಲ ಎಂದು ನನಗನಿಸುತ್ತಿದೆ. ಈ ಬಗ್ಗೆ ನಾನು ಸಿಎಂ ಬಸವರಾಜ ಬೊಮ್ಮಾಯಿಯವರ ಜೊತೆಗೆ ಚರ್ಚೆ ಮಾಡುತ್ತೇನೆ ಎಂದು ಶಾಸಕ ಪ್ರೀತಮ್ ಗೌಡ ಹರಿಹಾಯ್ದಿದ್ದಾರೆ.

- Advertisement -

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಹಾಸನ ಬಿಜೆಪಿ ಶಾಸಕ ಪ್ರೀತಮ್ ಗೌಡರಿಗೆ ಈ ಬಾರಿ ಬಸವರಾಜ ಬೊಮ್ಮಾಯಿಯವರ ಸಂಪುಟದಲ್ಲಿ ಸಚಿವ ಸ್ಥಾನ ಸಿಗಲಿದೆ ಎನ್ನಲಾಗಿತ್ತು. ಆದರೆ, ನೂತನ ಸಚಿವರ ಪಟ್ಟಿಯಲ್ಲಿ ಅವರ ಹೆಸರಿರಲಿಲ್ಲ. ಪ್ರೀತಮ್ ಗೌಡ ಅಸಮಾಧಾನಕ್ಕೆ ಇದು ಕೂಡ ಪ್ರಮುಖ ಕಾರಣ ಎಂದು ಹೇಳಲಾಗಿದೆ.

Join Whatsapp