ಬೆಳಗಾವಿ: ಮುಂದಿನ ವಿಧಾನಸಭಾ ಚುನಾವಣೆಗೆ ಇನ್ನೇನೂ ಕೆಲವೇ ತಿಂಗಳುಗಳು ಬಾಕಿಯಿರುವಂತೆ ವಿವಿಧ ಪಕ್ಷಗಳು ಚುನಾವಣೆ ತಯಾರಿ ನಡೆಸುತ್ತಿದ್ದು, ರಾಜ್ಯದಲ್ಲಿ ಗುಜರಾತ್ ಮಾದರಿಯಂತೆ ಬಿಜೆಪಿ ಟಿಕೆಟ್ ಹಂಚಿಕೆಯಾಗಲಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದು, ಇದೀಗ ಹಲವು ಬಿಜೆಪಿ ನಾಯಕರ ನಿದ್ದೆಗೆಡಿಸಿದಲ್ಲದೆ ಯತ್ನಾಲ್ ಹೇಳಿಕೆಯ ವಿರುದ್ಧ ಅಸಮಾಧಾನವೂ ವ್ಯಕ್ತವಾಗಿದೆ.
ಇತ್ತೀಚೆಗಷ್ಟೇ ಗುಜರಾತ್ ಹಾಗೂ ಹಿಮಾಚಲಪ್ರದೇಶ ವಿಧಾಸಭಾ ಚುನಾವಣೆಯಲ್ಲಿ, ಹಿಮಾಚಲಪ್ರದೇಶದಲ್ಲಿ ಬಿಜೆಪಿ ಹೀನಾಯವಾಗಿ ಸೋತಿದ್ದು, ಹೇಗಾದರೂ ಮಾಡಿ ಮತ್ತೊಮ್ಮೆ ಕರ್ನಾಟಕ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಸಚಿವ ಅಮಿತ್ ಶಾ, ಜೆ.ಪಿ ನಡ್ಡಾ ಸಾಕಷ್ಟು ಪ್ಲ್ಯಾನ್ ಮಾಡಿಕೊಂಡಿದ್ದು ಜನವರಿಯಿಂದಲೇ ರಾಜ್ಯದಲ್ಲೇ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಈ ಬಾರಿ ರಾಜ್ಯದಲ್ಲಿ ಗುಜರಾತ್ ಮಾದರಿಯಲ್ಲೇ ಬಿಜೆಪಿ ಟಿಕೆಟ್ ಹಂಚಿಕೆ ಮಾಡುತ್ತಾರೆ. ಬಹಳಷ್ಟು ಬದಲಾವಣೆ ಆಗಲಿದೆ. ಯಾರ ಮೇಲೆ ಆರೋಪ ಇದೆ ಅಂತಹವರನ್ನು ತೆಗೆಯಲಿದ್ದಾರೆ, ಜೊತೆಗೆ ಒಂದೇ ಕುಟುಂಬದಲ್ಲಿ ಎರಡು ಮೂರು ಟಿಕೆಟ್ ಈ ಬಾರಿ ಸಿಗುವುದಿಲ್ಲ. ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ಸಿಗುತ್ತದೆ. ಈ ಮೂಲಕ ಕರ್ನಾಟಕ ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಬ್ರೇಕ್ ಬೀಳುತ್ತದೆ ಎಂಬ ಹೇಳಿಕೆಯನ್ನ ಯತ್ನಾಳ ನೀಡಿದ್ದಾರೆ.