ಟಿವಿ, ಫ್ರಿಡ್ಜ್, ದ್ವಿಚಕ್ರ ವಾಹನ ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದುಪಡಿಸುವುದಾಗಿ ಹೇಳಿಕೆ ನೀಡಿರುವ ಆಹಾರ ಖಾತೆ ಸಚಿವ ಉಮೇಶ್ ಕತ್ತಿ ವಿರುದ್ಧ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಸ್ವತಃ ಸಚಿವ ಸುರೇಶ್ ಕುಮಾರ್ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದು, ಈಗ ಟಿವಿ, ಸ್ಕೂಟರ್ ಇಟ್ಟುಕೊಳ್ಳುವುದು ಕಾಮನ್, ಬಡವರು ಇದನ್ನು ಸಾಲ ಮಾಡಿ ಖರೀದಿಸಿರುತ್ತಾರೆ. ಸಚಿವರು ಯಾವ ಹಿನ್ನೆಲೆಯಲ್ಲಿ ಈ ತೀರ್ಮಾನಕ್ಕೆ ಬಂದಿದ್ದಾರೆ ಎಂಬುದು ಗೊತ್ತಿಲ್ಲ. ತಾವು ಕೂಡ ಉಮೇಶ್ ಕತ್ತಿಯೊಂದಿಗೆ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.
ಇತ್ತ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಕೂಡ ಸರ್ಕಾರದ ನಿರ್ಧಾರಕ್ಕೆ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು, ಸರ್ಕಾರಕ್ಕೆ ಹಾಗೂ ಸಚಿವರಿಗೆ ಬಡವರ ಬಗ್ಗೆ ಕಾಳಜಿ ಇಲ್ಲ ಎಂದು ಹರಿಹಾಯ್ದಿದಿದ್ದಾರೆ.
ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿಂದು ಉಮೇಶ್ ಕತ್ತಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಸಚಿವ ಉಮೇಶ್ ಕತ್ತಿ ನಿರ್ಧಾರಕ್ಕೆ ಆಕ್ರೋಶ ವ್ಯಕ್ತವಾಗಿದೆ.
ಸಾರ್ವಜನಿಕರು ಮತ್ತು ಸ್ವ ಪಕ್ಷದವರಿಂದಲೇ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಉಮೇಶ್ ಕತ್ತಿ ಸೋಮವಾರ ಸ್ಪಷ್ಟನೆ ನೀಡಿದ್ದು, ಬಿಪಿಎಲ್ ಪಡಿತರ ಚೀಟಿಯ ನಿಯಮಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ. ಈ ಹಿಂದೆ ಇದ್ದ ಮಾನದಂಡಗಳನ್ನೇ ಮುಂದುರಿಸಲಾಗುವುದು ಎಂದು ಹೇಳುವ ಮೂಲಕ ವಿವಾದಕ್ಕೆ ತೆರೆ ಎಳೆಯುವ ಕೆಲಸ ಮಾಡಿದ್ದಾರೆ.