ಬೆಂಗಳೂರು: ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಶಿಕ್ಷಣ ಸಚಿವರು ಅನುಮತಿ ನೀಡುವ ಮುಖಾಂತರ ಶಿಕ್ಷಣ ಕ್ಷೇತ್ರದಲ್ಲಿ ಅಶಾಂತಿ ಸೃಷ್ಟಿಸಿ ರಾಜಕೀಯ ಲಾಭ ಪಡೆಯುವ ಹುನ್ನಾರವಾಗಿದೆ. ಅಂದು ಯಾವುದೇ ಧಾರ್ಮಿಕ ಆಚರಣೆಗಳಿಗೆ ಅವಕಾಶವಿಲ್ಲವೆಂದ ಇದೇ ಸಚಿವರ ಇಂದಿನ ಹೇಳಿಕೆಯು ಏಕಪಕ್ಷೀಯವಾದ ತಾರತಮ್ಯ ಮತ್ತು ಸಂವಿಧಾನ ವಿರೋಧಿಯಾಗಿದೆ. ಇದು ಖಂಡನೀಯ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಥಾವುಲ್ಲ ಪುಂಜಾಲಕಟ್ಟೆ ಟೀಕಿಸಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಶಿಕ್ಷಣ ಇಲಾಖೆ ಸೂಚನೆ ಹೊರಡಿಸಿದೆ ಎಂದು ತಿಳಿದುಬಂದಿದೆ.
ಈ ಹಿಂದೆ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದಕ್ಕೆ ನಿರ್ಬಂಧ ವಿಧಿಸಿದ ಬಳಿಕ ಕೆಲವರು ಕೋರ್ಟ್ ಮೆಟ್ಟಿಲೇರಿದ್ದು, ಈ ಸಂದರ್ಭದಲ್ಲಿ ಧಾರ್ಮಿಕ ಚಿಹ್ನೆಗಳನ್ನು, ವಸ್ತ್ರಗಳನ್ನು ಪ್ರದರ್ಶಿಸುವಂತಿಲ್ಲ ಎಂದು ಆದೇಶ ಹೊರಡಿಸಲಾಗಿತ್ತು. ಆದರೆ ಇದೀಗ ಏಕಪಕ್ಷೀಯವಾಗಿ ಒಂದು ಧರ್ಮಕ್ಕೆ ಸೇರಿದ ಆಚರಣೆಯನ್ನು ಶಾಲಾ-ಕಾಲೇಜುಗಳಲ್ಲಿ ನಡೆಸಲು ಅನುಮತಿ ನೀಡಿರುವುದು ಎಷ್ಟು ಸರಿ ? ಎಂದು ಅವರು ಪ್ರಶ್ನಿಸಿದ್ದಾರೆ.