Home ಟಾಪ್ ಸುದ್ದಿಗಳು ಎಡಿಜಿಪಿ ಅಲೋಕ್‌ ಕುಮಾರ್‌ ವಿರುದ್ಧದ ಪ್ರಕರಣ ರದ್ದು

ಎಡಿಜಿಪಿ ಅಲೋಕ್‌ ಕುಮಾರ್‌ ವಿರುದ್ಧದ ಪ್ರಕರಣ ರದ್ದು

ಬೆಂಗಳೂರು: ಕ್ರಿಮಿನಲ್‌ ಪ್ರಕರಣ ಕೈಬಿಡುವ ಸಂಬಂಧ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ ಹಿರಿಯ ಐಪಿಎಸ್‌ ಅಧಿಕಾರಿ, ಎಡಿಜಿಪಿ ಅಲೋಕ್‌ ಕುಮಾರ್‌ ಅವರ ವಿರುದ್ಧದ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ತಮ್ಮ ವಿರುದ್ಧದ ಪ್ರಕರಣ ಹಾಗೂ ಅದಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಅಲೋಕ್‌ ಕುಮಾರ್‌ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣ ರದ್ದುಪಡಿಸಿ ಆದೇಶಿಸಿದೆ.

ಅರ್ಜಿದಾರರಾಗಿರುವ ಐಪಿಎಸ್‌ ಅಧಿಕಾರಿಯ ವಿರುದ್ಧ ವಿಚಾರಣೆಗೆ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೆ ವಿಚಾರಣಾ ನ್ಯಾಯಾಲಯ ಪ್ರಕರಣವನ್ನು ವಿಚಾರಣೆಗೆ ಅಂಗೀಕರಿಸಿದೆ ಎಂದು ಹೇಳಿರುವ ನ್ಯಾಯಪೀಠ, ಅಲೋಕ್‌ ಕುಮಾರ್‌ ವಿರುದ್ಧದ ಪ್ರಕರಣ ರದ್ದುಪಡಿಸಿದೆ.

ಆದರೆ, ಅರ್ಜಿದಾರರ ವಿರುದ್ದ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆದ ಬಳಿಕ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಲು ವಿಚಾರಣಾ ನ್ಯಾಯಾಲಯ ಸ್ವತಂತ್ರವಾಗಿದೆ ಎಂದು ನ್ಯಾಯಪೀಠ ಆದೇಶದಲ್ಲಿ ಹೇಳಿದೆ. ಆರೋಪ ಸಂಬಂಧ ದಾಖಲಾಗಿದ್ದ ಎಫ್ಐಆರ್‌ನಲ್ಲಿ ಅರ್ಜಿದಾರ ಆಲೋಕ್‌ ಕುಮಾರ್‌ ಹೆಸರು ಉಲ್ಲೇಖವಾಗಿಲ್ಲ. ಅಲ್ಲದೆ, ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್‌ ಸಲ್ಲಿಸಿದ್ದು, ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ರದ್ದುಪಡಿಸಲಾಗುತ್ತಿದೆ ಎಂದೂ ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.

ಪ್ರಕರಣದ ಹಿನ್ನೆಲೆ:

ರೌಡಿಶೀಟರ್‌ ಆಗಿದ್ದ ಬಿ.ಎಂ ಮಲ್ಲಿಕಾರ್ಜುನ ಅಲಿಯಾಸ್‌ ಫೈಟರ್‌ ರವಿ ಮತ್ತವರ ಆಪ್ತರು ವೈಯಾಲಿ ಕಾವಲ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿನ ಆರೆಂಜ್‌ ಬಾರ್‌ನಲ್ಲಿ ಮದ್ಯ ಸೇವಿಸುವ ಸಂದರ್ಭದಲ್ಲಿ ಗಲಾಟೆ ನಡೆದಿತ್ತು. ಈ ಆರೋಪದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಪ್ರಕರಣವನ್ನು ಮುಕ್ತಾಯಗೊಳಿಸಲು ವೈಯಾಲಿ ಕಾವಲ್‌ ಪೊಲೀಸ್‌ ಅಧಿಕಾರಿಗಳು ಪ್ರಾರಂಭದಲ್ಲಿ 5 ಲಕ್ಷ ರೂ. ಬಳಿಕ ಒಂದು ಕೋಟಿ ರೂ.ಗಳಿಗೆ ಬೇಡಿಕೆ ಇಟ್ಟಿದ್ದಾರೆ ಎಂಬುದಾಗಿ ಫೈಟರ್‌ ರವಿ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್‌ ಸಲ್ಲಿಸಿದ್ದರು. ಈ ಬಿ ರಿಪೋರ್ಟ್‌ ತಿರಸ್ಕರಿಸಿದ್ದ ವಿಶೇಷ ನ್ಯಾಯಾಲಯವು ಅಲೋಕ್‌ ಕುಮಾರ್‌ ವಿರುದ್ಧ ವಿಚಾರಣೆ ಮುಂದುವರೆಸಿತ್ತು. ಇದನ್ನು ಪ್ರಶ್ನಿಸಿ ಅಲೋಕ್‌ ಕುಮಾರ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು.

Join Whatsapp
Exit mobile version