ಕೊಡಗು: ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚೋದನಕಾರಿ ಭಾಷಣ| ಅಡ್ಡಂಡ ಕಾರ್ಯಪ್ಪ ವಿರುದ್ಧ ಪ್ರಕರಣ ದಾಖಲು

Prasthutha|

ಕೊಡಗು: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚೋದನಕಾರಿ ಭಾಷಣ ಮಾಡಿರುವ ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ವಿರುದ್ಧ ದಾಖಲಾಗಿದೆ.

- Advertisement -

ಚುನಾವಣಾ ಕ್ಷಿಪ್ರ ಪರಿಶೀಲನಾ ತಂಡದ ಆರ್.ಎನ್ ಕುಮಾರಸ್ವಾಮಿ ದೂರಿನ ಮೇರೆಗೆ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಿನಾಂಕ 04.05.2023 ರಂದು ಪೊನ್ನಂಪೇಟೆ ತಾಲ್ಲೂಕಿನ ಟಿ.ಶೆಟ್ಟಿಗೇರಿ ಗ್ರಾಮದಲ್ಲಿ ಬಿಜೆಪಿಯ ಚುನಾವಣಾ ಪ್ರಚಾರ ಸಭೆಯಲ್ಲಿ ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಕೊಡವ ಮತ್ತು ಕನ್ನಡ ಭಾಷೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಮುಸ್ಲಿಂ ಜನಾಂಗಕ್ಕೆ ಘೋಷಿಸಿರುವ ಸೌಲಭ್ಯವನ್ನು ಕುರಿತು ಭಾಷಣ ಮಾಡುವ ಸಂದರ್ಭದಲ್ಲಿ “ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಸ್ಲಿಂ ಸಮುದಾಯದವರಿಗೆ ಉಚಿತ ವಸತಿ ನಿಲಯ ನೀಡುವುದಾಗಿ ತಿಳಿಸಿದ್ದು, ಈ ವಸತಿ ಶಾಲೆಗಳಲ್ಲಿ ಹಿಂದೂಗಳನ್ನು ಕೊಲ್ಲಲು ತರಬೇತಿ ನೀಡುವ ಉದ್ದೇಶದಿಂದ ಈ ಸೌಲಭ್ಯ ನೀಡುತ್ತಿದ್ದಾರೆ” ಎಂದು ಆರೋಪಿಸಿ ಭಾಷಣ ಮಾಡಿದ್ದು, ಇದರಿಂದ ಧರ್ಮ ಧರ್ಮಗಳ ನಡುವೆ ಸಾಮರಸ್ಯ ಕದಡಿ, ಶತ್ರುತ್ವವನ್ನು ಉಂಟುಮಾಡಿ ಸಾರ್ವಜನಿಕ ನೆಮ್ಮದಿಗೆ ಭಂಗ ಹಾಗೂ ಭಯ ಭೀತಿ ಮೂಡಿಸುವಂತೆ ಹಲವು ರೀತಿಯ ಪ್ರಚೋದನಕಾರಿ ಭಾಷಣ ಮಾಡಿರುತ್ತಾರೆ. ಹಾಗೂ ಚುನಾವಣೆಗೆ ಸಂಬಂಧಿಸಿದಂತೆ ಕೆಲವು ಸುಳ್ಳು ಮಾಹಿತಿಯನ್ನು ನೀಡಿರುತ್ತಾರೆ. ಆದ್ದರಿಂದ ಪ್ರಚೋದನಕಾರಿ ಭಾಷಣ ಮಾಡಿ ಮಾದರಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

- Advertisement -

ಅಡ್ಡಂಡ ಕಾರ್ಯಪ್ಪ ವಿರುದ್ಧ ಐಪಿಸಿ 153(ಎ), 171(G) ಮತ್ತು 125 ಆರ್.ಪಿ ಕಾಯ್ದೆ 1951 ಪ್ರಕರಣ ದಾಖಲಾಗಿದೆ.

ಕಳೆದ ಕೆಲವು ದಿನಗಳಿಂದ ವಿರಾಜಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಜಿ ಬೋಪಯ್ಯ ಪರವಾಗಿ ಮತಯಾಚನೆಯಲ್ಲಿ ತೊಡಗಿರುವ ಕಾರ್ಯಪ್ಪ ಕ್ಷೇತ್ರದ ಹಲವು ಭಾಗಗಳಲ್ಲಿ ಪ್ರಚೋದನಕಾರಿ ಭಾಷಣ ಮಾಡಿರುವುದರ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಅಪ್ರಪ್ರಚಾರ ಮಾಡುವುದರ ಜತೆಗೆ ತೇಜೋವಧೆ ಮಾಡುವ ವೀಡಿಯೋ ಒಂದನ್ನು ಕಾರ್ಯಪ್ಪ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ಕಾರ್ಯಪ್ಪ ವಿರುದ್ಧ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲದೆ ಮಾಲ್ದಾರೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿರುವುದರ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.