ಜೈಪುರ: ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಾಲ್ವರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಒಂಬತ್ತು ಶಿಕ್ಷಕರು ಮತ್ತು ಸರ್ಕಾರಿ ಶಾಲೆಯ ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಸಂತ್ರಸ್ತೆಯೋರ್ವಳ ತಂದೆ, ಮಗಳು ಶಾಲೆಗೆ ತೆರಳಲು ನಿರಾಕರಿಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. 10 ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅದೇ ಶಾಲೆಯ ಪ್ರಾಂಶುಪಾಲರು ಮತ್ತು ಇತರ ಮೂವರು ಶಿಕ್ಷಕರು ಸೇರಿಕೊಂಡು ಒಂದು ವರ್ಷದಿಂದ ಸಾಮೂಹಿಕ ಅತ್ಯಾಚಾರವೆಸಗುತ್ತಿದ್ದರು. ಮಾತ್ರವಲ್ಲ ಇಬ್ಬರು ಮಹಿಳಾ ಶಿಕ್ಷಕರು ಕೃತ್ಯವನ್ನು ವೀಡಿಯೋ ಚಿತ್ರೀಕರಿಸುತ್ತಿದ್ದರು ಎಂದು ಆರೋಪಿಸಲಾಗಿದೆ.
ಈ ಸಂಬಂಧ ಮೂರು ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ ಎಂದು ಮಂಧಾನ ಪೊಲೀಸ್ ಠಾಣಾಧಿಕಾರಿ ಮುಖೇಶ್ ಯಾದವ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಅತ್ಯಾಚಾರ ಪ್ರಕರಣ ಮತ್ತು ಲೈಂಗಿಕ ಕಿರುಕುಳ ಪ್ರಕರಣವನ್ನು ಬಹಿರಂಗಪಡಿಸಿದರೆ ಕೊಲ್ಲುವುದಾಗಿ ಶಿಕ್ಷಕರು ಮತ್ತು ಪ್ರಾಂಶುಪಾಲರು ಬೆದರಿಕೆವೊಡ್ಡಿದ್ದರು ಎಂದು ಸಂತ್ರಸ್ತೆಯರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.