‘ಬಿಗ್ ಬಾಸ್’ ರಿಯಾಲಿಟಿ ಶೋ ವಿರುದ್ಧ ಪ್ರಕರಣ ದಾಖಲು

Prasthutha|

ಬೆಂಗಳೂರು: ‘ಕಲರ್ಸ್ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ರಿಯಾಲಿಟಿ ಶೋ ‘ಬಿಗ್ ಬಾಸ್’ನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದ್ದು, ತಕ್ಷಣ ಕಾರ್ಯಕ್ರಮ ನಿಲ್ಲಿಸಿ ಸಂಬಂಧಪಟ್ಟ ಇಲಾಖೆಯಿಂದ ತನಿಖೆ ನಡೆಸಬೇಕು’ ಎಂದು ಕೋರಿ ಸಾಮಾಜಿಕ ಕಾರ್ಯಕರ್ತೆ ಎಂ.ನಾಗಮಣಿ ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗ ಪ್ರಕರಣ ದಾಖಲಿಸಿಕೊಂಡಿದೆ.

- Advertisement -


ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಗಳನ್ನು ನರಕವಾಸ ಎಂಬ ಕಾನ್ಸೆಪ್ಟ್ ನಡಿಯಲ್ಲಿ ಕೂಡಿಟ್ಟು ಸರಿಯಾದ ಆಹಾರ ಕೊಡದೆ ಹಿಂಸಿಸಲಾಗುತ್ತಿರುವ ಕುರಿತು ಸಲ್ಲಿಕೆಯಾಗಿದ್ದ ದೂರಿನ ಹಿನ್ನೆಲೆಯಲ್ಲಿ ಮಾನವ ಹಕ್ಕು ಆಯೋಗ ಪ್ರಕರಣ (ಕೇಸ್ ನಂ. 4044/10/31/2024-V) ದಾಖಲಿಸಿಕೊಂಡಿದೆ.


‘ಮನರಂಜನಾ ಹಾಗೂ ಇತರೆ ಕ್ಷೇತ್ರದಲ್ಲಿ ಹೆಸರು ಮಾಡಿದ ವ್ಯಕ್ತಿಗಳನ್ನು ಒಂದು ಮನೆಯಲ್ಲಿ ಕೂಡಿ ಹಾಕಿ ನಡೆಸುವ ಶೋ ಇದು. ಸ್ಪರ್ಧಿಗಳಿಗೆ ಹಲವು ರೀತಿಯ ಮಾನಸಿಕ, ದೈಹಿಕ ಸವಾಲುಗಳನ್ನು ನೀಡಲಾಗುತ್ತದೆ. ತಮ್ಮನ್ನು ತಾವು ಉಳಿಸಿಕೊಳ್ಳಲು ಇನ್ನೊಬ್ಬರ ಮೇಲೆ ಹಲವು ರೀತಿಯಲ್ಲಿ ಆಕ್ರಮಣ ಮಾಡುವ ಅನಿವಾರ್ಯತೆ ಸೃಷ್ಟಿಸಲಾಗುತ್ತದೆ. ಚಿತ್ರಹಿಂಸೆ, ಕ್ರೌರ್ಯದ ದೃಶ್ಯಗಳನ್ನು ಮಾಧ್ಯಮದ ಮೂಲಕ ಪ್ರಸಾರ ಮಾಡುವುದು ಅಪರಾಧ. ಹಾಗಾಗಿ ಕಾರ್ಯಕ್ರಮ ಸ್ಥಗಿತಗೊಳಿಸಬೇಕು’ ಎಂದು ಎಂ.ನಾಗಮಣಿ ಮನವಿ ಮಾಡಿದ್ದರು.

- Advertisement -

ಬಹುಮಾನ ಮತ್ತು ಹಣದ ಆಮಿಷ ಒಡ್ಡಿ ಸ್ಪರ್ಧಿಗಳನ್ನು ಬಿಡದಿ ಸಮೀಪದ ನಿರ್ಜನ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಮನೆಯೊಂದರಲ್ಲಿ ಕೂಡಿಹಾಕಲಾಗಿದೆ. ಟಾಸ್ಕ್ ಗಳ ಹೆಸರಲ್ಲಿ ಅವರಿಗೆ ದೈಹಿಕ, ಮಾನಸಿಕ ಹಿಂಸೆಯನ್ನು ನೀಡಲಾಗುತ್ತಿದೆ. ಹಣ, ಬಹುಮಾನದ ಆಸೆಗೆ ಕಾಂಟ್ರಾಕ್ಟ್ ಗೆ ಸಹಿ ಮಾಡಿದ ಸ್ಪರ್ಧಿಗಳು ಅಲ್ಲಿ ನಡೆಯುವ ಶೋಷಣೆಯನ್ನು ಹೊರಗೆ ಹೇಳದಂತೆ ಬಾಯಿಮುಚ್ಚಿಸಲಾಗಿದೆ.

ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಸ್ಪರ್ಧಿಗಳನ್ನು ಅಕ್ರಮವಾಗಿ ಬಂಧಿಸಿಟ್ಟು, ಅವರಿಗೆ ಸರಿಯಾದ ಪೌಷ್ಠಿಕ ಆಹಾರವನ್ನೂ ನೀಡದೆ, ಅವರ ದೇಹಬಾಧೆ ತೀರಿಸಿಕೊಳ್ಳಲೂ ಇತರರ ಅನುಮತಿ ಪಡೆಯುವಂಥ ಪರಿಸ್ಥಿತಿ ನಿರ್ಮಿಸಿರುವುದು ಅತ್ಯಂತ ಸ್ಪಷ್ಟವಾಗಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿರುತ್ತದೆ. ಈ ಶೋಷಣೆಗೆ ಒಂದು ವೇಳೆ ಆಮಿಷಕ್ಕೆ ಒಳಗಾಗಿ ಸ್ಪರ್ಧಿಗಳು ಒಪ್ಪಿಗೆ ನೀಡಿದ್ದರೂ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು.



Join Whatsapp