ಬೆಂಗಳೂರು: ದೇಶಾದ್ಯಂತ ಜಾತಿಗಣತಿ ವರದಿ ನಡೆದು ಅವಕಾಶ ವಂಚಿತ ಸಮುದಾಯಗಳಿಗೆ ನ್ಯಾಯ ಕೊಡಿಸುವ ನನ್ನ ನಿರ್ಧಾರ ಅಚಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇನ್ನೊಂದೆಡೆ ಒಕ್ಕಲಿಗರ ಸಂಘದ ಒತ್ತಡಕ್ಕೆ ಮಣಿದು ಜಾತಿಗಣತಿ ವರದಿ ತಿರಸ್ಕರಿಸುವ ಪತ್ರಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಹಿ ಮಾಡಿದ್ದಾರೆ ಎನ್ನಲಾಗುತ್ತಿದೆ.
ಸಿದ್ದರಾಯಮಯ್ಯ ಈ ಕುರಿತು ತಮ್ಮ ನಿಲುವು ಅಚಲ ಎಂದಿದ್ದಾರೆ. ನಮ್ಮ ಹೆಮ್ಮೆಯ ನಾಯಕರಾದ ರಾಹುಲ್ ಗಾಂಧಿಯವರ ನಿಲುವಿಗೆ ನನ್ನ ಪೂರ್ಣ ಸಹಮತ. ದೇಶಾದ್ಯಂತ ಜಾತಿಗಣತಿ ನಡೆದು, ಅದರ ವರದಿಯ ಆಧಾರದ ಮೇಲೆ “ಸರ್ವರಿಗೂ ಸಮಪಾಲು – ಸರ್ವರಿಗೂ ಸಮಬಾಳು” ದಕ್ಕಿದಾಗಲೇ ದೇಶಕ್ಕೆ ದೊರೆತ ಸ್ವಾತಂತ್ರ್ಯ ಸಾರ್ಥಕವಾಗಲಿದೆ ಎಂಬುದು ನನ್ನ ಭಾವನೆ. ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನಡೆಸಿದ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸ್ವೀಕರಿಸಿ, ಅವಕಾಶಗಳಿಂದ ವಂಚಿತವಾದ ಸಮುದಾಯಗಳಿಗೆ ನ್ಯಾಯ ಕೊಡಿಸುವ ನನ್ನ ನಿರ್ಧಾರ ಅಚಲವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ಒಕ್ಕಲಿಗರ ಸಂಘದಿಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ ಮಾಡಿ, ರಾಜ್ಯದಲ್ಲಿ ಜಾತಿ ಜನಗಣತಿ ವರದಿಯನ್ನು ಬಿಡುಗಡೆ ಮಾಡಬಾರದು. ಆ ವರದಿಯನ್ನು ತಿರಸ್ಕರಿಸುವಂತೆ ಮನವಿ ಪತ್ರ ನೀಡಿದ್ದು, ಆ ಮನವಿ ಪತ್ರಕ್ಕೆ ಶಿವಕುಮಾರ್ ಒಪ್ಪಿಗೆ ಸೂಚಿಸಿ, ಸಹಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಪತ್ರವೊಂದು ವೈರಲ್ ಆಗಿದೆ.
ಇನೊಂದೆಡೆ ರಾಜ್ಯದಲ್ಲಿ ಜಾತಿ ಜನಗಣತಿ ವರದಿ ಸಲ್ಲಿಕೆಗೆ ದಿನಾಂಕ ನಿಗದಿಯಾಗಿದೆ. ಇದೇ 24 ಶುಕ್ರವಾರದಂದು ಹಿಂದುಳಿದ ವರ್ಗಗಳ ಆಯೋಗ ಜಾತಿ ಜನಗಣತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ. ಈ ಜಾತಿ ಜನಗಣತಿ ವರದಿ ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸುವ ಸಾಧ್ಯತೆಯಿದೆ ಎಂದು ರಾಜ್ಯ ಗುಪ್ತಚರ ಇಲಾಖೆ ಎಚ್ಚರಿಸಿದೆ ಎಂದು ತಿಳಿದು ಬಂದಿದೆ.