ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸಿಡಬ್ಲ್ಯೂಆರ್ಸಿ ಹೊರಡಿಸಿದ ಆದೇಶವನ್ನು ಪಾಲನೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸೂಚಿಸಿದೆ. ಇದರಿಂದಾಗಿ ಕರ್ನಾಟಕ ಸರ್ಕಾರ ಇಕ್ಕಟ್ಟಿನಲ್ಲಿ ಸಿಲುಕಿದೆ. ಹೀಗಾಗಿ ಇಂದು ಸಂಜೆ ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾಳೆ ಕಾನೂನು ತಜ್ಞರ ಜೊತೆ ಸಭೆ ನಡೆಸಲಿದ್ದಾರೆ.
ದೆಹಲಿಯ ತಾಜ್ ಮಾನ್ ಸಿಂಗ್ ಹೋಟೆಲ್ನಲ್ಲಿ ನಡೆಯುವ ಕಾನೂನು ತಜ್ಞರ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರುಗಳು, ಲೋಕಸಭಾ ಸದಸ್ಯರು ಹಾಗೂ ರಾಜ್ಯ ಸಭಾ ಸದಸ್ಯರು ಭಾಗಿಯಾಗಲಿದ್ದಾರೆ.
ಮುಂದಿನ ಕಾನೂನು ಪ್ರಕ್ರಿಯೆ ಬಗ್ಗೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಮಾಹಿತಿ ಪಡೆಯಲಿದ್ದಾರೆ. ಜೊತೆಗೆ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ಸಮಾಲೋಚನೆ ನಡೆಸಲಿದ್ದು, ಕೇಂದ್ರದ ಬಳಿ ಬಾಕಿ ಯೋಜನೆಗಳ ಅನುದಾನ, ಬರ ಪರಿಹಾರದ ಬಗ್ಗೆ ಚರ್ಚೆ ನಡೆಸಲಿದ್ದಾರೆ.