ಮಂಗಳೂರು ಪೊಲೀಸರ ಕಾರ್ಯಾಚರಣೆ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿಯ ಬಂಧನ

Prasthutha|

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರಗ್ಸ್ ದಂಧೆ ಹೆಚ್ಚಳವಾಗುತ್ತಿದ್ದು, ಈಗಾಗಲೇ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಕಾಲೇಜು ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ. ಇದೀಗ ಮಂಗಳೂರು ನಗರದ ಬೆಂದೂರ್ ವೆಲ್ ಪರಿಸರದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

- Advertisement -

ನಗರದ ಕಾಲೋಜುವೊಂದರ ಪದವಿ ವಿದ್ಯಾರ್ಥಿಯಾಗಿರುವ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಲುಕ್ಮಾನುಲ್ ಹಕೀಂ (22) ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ 1 ಲಕ್ಷ 25 ಸಾವಿರ ಮೌಲ್ಯದ 25 ಗ್ರಾಂ‌ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಇದರ ಜೊತೆಗೆ ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನ ಸೇರಿದಂತೆ ಒಟ್ಟು 1 ಲಕ್ಷ 60 ಸಾವಿರ ಮೌಲ್ಯದ ವಸ್ತುಗಳನ್ನು ಕೂಡ ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ.

ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ಮಂಗಳೂರು ನಗರದ ಬೆಂದೂರ್ ವೆಲ್ ಪರಿಸರದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಇನ್ನು ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸದ್ಯ ಆರೋಪಿ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಡ್ರಗ್ಸ್ ದಂಧೆ ವಿರುದ್ಧ ಪೊಲೀಸರಿಂದ ಜಾಗೃತಿ

ನಗರದಲ್ಲಿ ಡ್ರಗ್ಸ್ ದಂಧೆ ಹೆಚ್ಚಳವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸಿಸಿಬಿ ಪೊಲೀಸರು, ಡ್ರಗ್ಸ್ ಮುಕ್ತ ಮಂಗಳೂರನ್ನಾಗಿಸಲು ಅಖಾಡಕ್ಕಿಳಿದಿದ್ದಾರೆ. ವಿದ್ಯಾರ್ಥಿಗಳು ಕೂಡ ಮಾದಕ ಲೋಕದಲ್ಲಿ ತೇಲಾಡುತ್ತಿರುವುದರಿಂದ ಶಾಲಾ ಕಾಲೇಜುಗಳಲ್ಲಿ ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ.

Join Whatsapp