ಲಕ್ನೋ: ಪ್ರತಿಪಕ್ಷಗಳನ್ನು ಗುರಿಯಾಗಿಸಲು ಕೇಂದ್ರ ಸರ್ಕಾರ ಸ್ವತಂತ್ರ ಏಜೆನ್ಸಿಗಳನ್ನು ಛೂ ಬಿಡಲಾಗುತ್ತಿದೆ ಎಂದು ಆರೋಪಿಸಿದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಈ ಸಂಬಂಧ ಚುನಾವಣಾ ಆಯೋಗ ಮತ್ತು ಭಾರತದ ರಾಷ್ಟ್ರಪತಿಗಳನ್ನು ಸಂಪರ್ಕಿಸುವುದಾಗಿ ತಿಳಿಸಿದ್ದಾರೆ.
ಪ್ರತಿಪಕ್ಷಗಳನ್ನು ಗುರಿಯಾಗಿಸಲು ಮತ್ತು ಪ್ರಜಾಪ್ರಭುತ್ವವನ್ನು ಅಪಹಾಸ್ಯ ಮಾಡಲು ಕೇಂದ್ರೀಯ ಸಂಸ್ಥೆಗಳನ್ನು ಹೇಗೆ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬುದರ ಕುರಿತು ಚುನಾವಣಾ ಆಯೋಗ ಮತ್ತು ರಾಷ್ಟ್ರಪತಿಗಳಿಗೆ ಪತ್ರ ಬರೆಯುವುದಾಗಿ ಅವರು ತಿಳಿಸಿದ್ದಾರೆ.
ಸಮಾಜವಾದಿ ಪಕ್ಷದ MLC, ಸುಗಂಧ ದೃವ್ಯದ ಬ್ಯಾರನ್ ಪುಷ್ಪರಾಜ್ ಜೈನ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಅಖಿಲೇಶ್ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.
ಸೋಲಿನ ಭೀತಿಯಲ್ಲಿರುವ ಮುಖ್ಯಮಂತ್ರಿ ಆದಿತ್ಯನಾಥ್ ಮತ್ತು ಕೇಂದ್ರ ಸರ್ಕಾರ ವಿರೋಧ ಪಕ್ಷಗಳನ್ನು ಗುರಿಯಾಗಿಸಿ ನಿರಂತರ ದಾಳಿ ನಡೆಸಿ ತೊಂದರೆ ನೀಡುತ್ತಿದೆ ಎಂದು ಅಖಿಲೇಶ್ ಯಾದವ್ ಸುದ್ದಿಗಾರರಿಗೆ ತಿಳಿಸಿದರು.