ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ರದ್ದುಪಡಿಸಿದ ಕೇಂದ್ರ ಸರ್ಕಾರದ್ದು ಶಿಕ್ಷಣ ವಿರೋಧಿ ನಡೆ: ವೆಲ್ಫೇರ್ ಪಾರ್ಟಿ ಕಿಡಿ

Prasthutha|

ಬೆಂಗಳೂರು: ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್’ನ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯಲ್ಲಿ ಬರುವ 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಕೊಡಮಾಡುತ್ತಿದ್ದ ವಿದ್ಯಾರ್ಥಿ ವೇತನವನ್ನು ಈ ವರ್ಷದಿಂದ ರದ್ದುಗೊಳಿಸುವ ನಿರ್ಧಾರವನ್ನು ತೆಗೆದುಕೊಂಡ ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ನಡೆಯನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ತೀವ್ರವಾಗಿ ಖಂಡಿಸಿದ್ದು, ಈ ಸುತ್ತೋಲೆಯನ್ನು ಹಿಂಪಡೆಯದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

- Advertisement -

1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳು ಆರ್’ಟಿಇ ಅಡಿಯಲ್ಲಿ ಬರುವ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಪಡೆಯುತ್ತಿದ್ದು, ಅವರಿಗೆ ಸ್ಕಾಲರ್’ಶಿಪ್’ನ ಅಗತ್ಯತೆ ಬೀಳುವುದಿಲ್ಲ. ಹಾಗಾಗಿ ಈ ನಿರ್ಧಾರವನ್ನು ಕೈಗೊಂಡಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ, ಇದು ಆರ್’ಟಿಇ ಕಾಯ್ದೆಯ ತಪ್ಪು ವ್ಯಾಖ್ಯಾನವಾಗಿದೆ. ಮೂಲಭೂತ ಹಕ್ಕಾದ ಆರ್’ಟಿಇ ಕಾಯ್ದೆಯನ್ನು ಅನುಷ್ಠಾನಗೊಳಿಸಲು ಸಹಕಾರಿಯಾಗುವ ಸ್ಕಾಲರ್’ಶಿಪ್ ಅನ್ನು ಹೆಚ್ಚುವರಿ ಸವಲತ್ತು ಎಂಬಂತೆ ಬಿಂಬಿಸುವುದು ತಪ್ಪಾಗುತ್ತದೆ. ಮಕ್ಕಳ ಶಾಲಾ ದಾಖಲಾತಿಯನ್ನು ಖಚಿತಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಅದರ ಭಾಗವಾಗಿ ಸ್ಕಾಲರ್’ಶಿಪ್ ಅನ್ನು ಜಾರಿಗೆ ತರಲಾಗಿದೆ ಎಂಬುದನ್ನು ಕೇಂದ್ರ ಸರ್ಕಾರ ಮನವರಿಕೆ ಮಾಡಿಕೊಳ್ಳಬೇಕಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ತಾಹಿರ್ ಹುಸೇನ್ ಹೇಳಿದ್ದಾರೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿವೇತನವು 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳು ಪ್ರಾಥಮಿಕ ಶಿಕ್ಷಣದಿಂದ ದೂರ ಉಳಿಯಬಾರದು ಎಂಬ ಆಶಯವನ್ನು ಹೊಂದಿದೆ. ಅದಕ್ಕಾಗಿ ಸ್ಕಾಲರ್’ಶಿಪ್ ಅನ್ನು ನೀಡಲಾಗುತ್ತಿದೆ ಎಂಬುದನ್ನು ಸರ್ಕಾರ ಮರೆತಿರುವುದು ದುರಂತ. ಸರ್ಕಾರವು ಮಕ್ಕಳ ಶಾಲಾ ದಾಖಲಾತಿಯನ್ನು ಖಚಿತಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ, ಕೇಂದ್ರ ಈ ಸುತ್ತೋಲೆಯು ಸಂವಿಧಾನದ ಮೂಲಭೂತ ಹಕ್ಕಾದ ಶಿಕ್ಷಣದ ಹಕ್ಕನ್ನು ದುರ್ಬಲಗೊಳಿಸುವ ಪ್ರಯತ್ನವಾಗಿದೆ, ಇದು ಸ್ಪಷ್ಟವಾಗಿ ಬಿಜೆಪಿಯ ಶಿಕ್ಷಣ ವಿರೋಧಿ ಧೋರಣೆಯಾಗಿದೆ, ಬಿಜೆಪಿಯು ಅಧಿಕಾರಕ್ಕೆ ಬಂದಾಗಿನಿಂದ ಸಂವಿಧಾನದ ಆಶಯಗಳು ಮತ್ತು ಮೂಲಭೂತ ಹಕ್ಕುಗಳ ಆಶಯಗಳನ್ನು ಒಂದಿಲ್ಲೊಂದು ರೀತಿಯಲ್ಲಿ ದುರ್ಬಲಗೊಳಿಸುತ್ತಿದೆ ಎಂದು ಅವರು ಹೇಳಿದರು.

- Advertisement -

ರಾಜ್ಯ ಮತ್ತು ದೇಶದ ವಿವಿಧ ರಾಜ್ಯಗಳಲ್ಲಿ ಕೊರೋನಾ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಲಕ್ಷಾಂತರ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಹಿನ್ನೆಲೆಯುಳ್ಳ ಮಕ್ಕಳು ಶಾಲೆಯಿಂದ ಹೊರಗುಳಿದ ಬಗ್ಗೆ ಇತ್ತೀಚೆಗೆ ಕರ್ನಾಟಕ ಹೈಕೋರ್ಟ್ ನೇಮಿಸಿದ್ದ ಸಮಿತಿಯು ಬಹಿರಂಗಪಡಿಸಿದ್ದ ವರದಿಯು ಅತ್ಯಂತ ಕಳವಳಕಾರಿ ಸಂಗತಿಯಾಗಿತ್ತು, ಇದೀಗ ಆ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರಲು ಸಾಧ್ಯವಾಗುವ ಎಲ್ಲ ರೀತಿಯ ಸೌಲಭ್ಯ ಮತ್ತು ಸೌಕರ್ಯಗಳನ್ನು ಒದಗಿಸಲು ಯೋಜನೆ ರೂಪಿ‌ಸಬೇಕಾದ ಹೊತ್ತಲ್ಲಿ, ಕೇಂದ್ರದ ಇಂತಹ ಶಿಕ್ಷಣ ವಿರೋಧಿ ನಡೆಯು ದೇಶದ ಸಾಕ್ಷರತಾ ಪ್ರಮಾಣವನ್ನು ಕುಂಠಿತಗೊಳಿಸುತ್ತದೆ ಎಂದು ತಾಹಿರ್ ಹುಸೇನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.



Join Whatsapp