ಬೆಂಗಳೂರು: ನಾಳೆಯಿಂದ 3 ದಿನಗಳ ಕಾಲ ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದೆ. ಈ ಬಾರಿ 2,16,525 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದಾರೆ. ರಾಜ್ಯದ 486 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ಜೂನ್ 18 ರಂದು ನಡೆಯಲಿದ್ದು, 1708 ವಿದ್ಯಾರ್ಥಿಗಳು ನೋಂದಣಿ ಆಗಿದ್ದಾರೆ. ಇವರಿಗೆ ಗಡಿಭಾಗದ ಜಿಲ್ಲೆಗಳಾದ ಬೆಂಗಳೂರು, ಬೀದರ್, ಬೆಳಗಾವಿ, ವಿಜಯಪುರ, ಬಳ್ಳಾರಿ, ಮಂಗಳೂರಿನಲ್ಲಿ ಪರೀಕ್ಷೆಗಳು ನಡೆಯಲಿದೆ. ಪರೀಕ್ಷೆಗೆ 486 ವೀಕ್ಷಕರು, ಪ್ರಶ್ನೆ ಪತ್ರಿಕೆ ಪಾಲಕರು, 972 ವಿಶೇಷ ತಪಾಸಣೆ ದಳ ಸೇರಿ 20 ಸಾವಿರ ಅಧಿಕಾರಿಗಳು ಪರೀಕ್ಷಾ ಕೆಲಸ ನಿರ್ವಹಣೆ ಮಾಡಲಿದ್ದಾರೆ.
ಸಿಇಟಿ ಪರೀಕ್ಷೆಗೆ ನೀಟ್ ಮಾದರಿಯ ನಿಯಮ ಜಾರಿ ಮಾಡಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಹಿಜಾಬ್ ನಿಷೇಧ ಮಾಡಲಾಗಿದೆ. ತಲೆ ಮತ್ತು ಕಿವಿ ಮುಚ್ಚಿಕೊಳ್ಳುವ ವಸ್ತ್ರ ಧರಿಸಬಾರದು. ವಿದ್ಯಾರ್ಥಿಗಳು ಹಾಫ್ ಶರ್ಟ್ ಮಾತ್ರ ಹಾಕಬೇಕು. ಮೊಬೈಲ್ ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣಗಳು ಪರೀಕ್ಷಾ ಕೇಂದ್ರಕ್ಕೆ ನಿಷೇಧ ಮಾಡಲಾಗಿದೆ. ಕೈ ಗಡಿಯಾರವನ್ನು ಪರೀಕ್ಷಾ ಕೇಂದ್ರಕ್ಕೆ ನಿಷೇಧ ಮಾಡಲಾಗಿದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಾಗಿದೆ. ಖಜಾನೆಯಿಂದ ಪರೀಕ್ಷಾ ಕೇಂದ್ರದವರೆಗೂ ವೀಡಿಯೋ ಚಿತ್ರೀಕರಣಕ್ಕೆ ನಿರ್ಧಾರ ಮಾಡಲಾಗಿದೆ ಎಂದು ತಿಳಿದು ಬಂದಿದೆ.