ಬಳ್ಳಾರಿ: ಬಳ್ಳಾರಿಯ ಬಿಐಟಿಎಂ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಎನ್ ಇಪಿ ಕುರಿತ ಕಾರ್ಯಾಗಾರಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಬಳ್ಳಾರಿ ಬಿಐಟಿಎಂ ಕಾಲೇಜಿನಲ್ಲಿ ಇಂದು ಎನ್ ಇ ಪಿ ಕುರಿತು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ ನಾರಾಯಣ, ಸಚಿವ ಬಿ.ಶ್ರೀರಾಮುಲು ಕೂಡ ಆಗಮಿಸಿದ್ದರು.
ಈ ವೇಳೆ NEP ನೀತಿಯ ವಿದ್ಯಾರ್ಥಿ ವಿರೋಧಿಯಾಗಿದ್ದು, ಇದರಿಂದ ರಾಜ್ಯದಲ್ಲಿ ಶೈಕ್ಷಣಿಕ ಅಸಮತೋಲನ ಉಂಟಾಗಲಿದೆ. ಶಿಕ್ಷಣ ವ್ಯವಸ್ಥೆ ಅಲ್ಲೋಲಕಲ್ಲೋಲವಾಗಲಿದೆ. ಈ ಬಗ್ಗೆ ವಿಸ್ತೃತ ಚರ್ಚೆ ನಡೆಯಬೇಕು. ತರಾತುರಿಯಲ್ಲಿ ನೀತಿಯನ್ನು ಜಾರಿಗೊಳಿಸಬಾರದು ಎಂದು ಒತ್ತಾಯಿಸಿ ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಮೆರವಣಿಗೆ ಮೂಲಕ ಆಗಮಿಸಿ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು, ಈ ವೇಳೆ ವಿದ್ಯಾರ್ಥಿಗಳನ್ನು ತಡೆಯಲು ಪೊಲೀಸರು ಯತ್ನಿಸಿದರು. ಪೊಲೀಸರ ನಡೆಯನ್ನು ವಿರೋಧಿಸಿ ವಿದ್ಯಾರ್ಥಿಗಳು ಸ್ಥಳದಲ್ಲೇ ಪ್ರತಿಭಟನೆಗೆ ಕುಳಿತು ಘೋಷಣೆ ಕೂಗಿದರು. ನಮಗೆ ಸಚಿವರೊಂದಿಗೆ ಮಾತನಾಡಲು ಅವಕಾಶ ನೀಡಿ ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು. ಆದರೆ ಅದಕ್ಕೆ ಅವಕಾಶ ನೀಡದ ಪೊಲೀಸರು ವಿದ್ಯಾರ್ಥಿಗಳನ್ನು ಬಂಧಿಸಿ ಬೇರೆಡೆಗೆ ಕರೆದೊಯ್ದರು.
ವಿದ್ಯಾರ್ಥಿಗಳ ಬಂಧನವನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಥಾವುಲ್ಲಾ ಪುಂಜಾಲಕಟ್ಟೆ ತೀವ್ರವಾಗಿ ಖಂಡಿಸಿದ್ದು, ಎನ್ ಇಪಿ ಜನವಿರೋಧಿ ಹಾಗೂ ವಿದ್ಯಾರ್ಥಿ ವಿರೋಧಿಯಾಗಿದೆ. ಇದು ನಾಗಪುರದ ನೀತಿಯಾಗಿದೆ. ಇದನ್ನು ಜಾರಿ ಮಾಡುವ ಮೊದಲು ವಿದ್ಯಾರ್ಥಿ ಸಂಘಟನೆಗಳೊಂದಿಗೆ ಚರ್ಚಿಸಬೇಕು ಎಂದು ಆಗ್ರಹಿಸಿದರು.
ಮುಂದಿನ ದಿನಗಳಲ್ಲೂ ಈ ನೀತಿಯ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ, ಧರಣಿ, ಸಚಿವರ ಕಾರ್ಯಕ್ರಮಕ್ಕೆ ಮುತ್ತಿಗೆ ಮುಂದುವರಿಯಲಿದೆ ಎಂದು ತಿಳಿಸಿದರು.