ಬೆಂಗಳೂರು: ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ವಕ್ಫ್ ಮಂಡಳಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು. ಪ್ರಕರಣದ ವಿಚಾರಣೆ ಮಂಗಳವಾರ ನಡೆಯಲಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಹಾಗೂ ನ್ಯಾಯಮೂರ್ತಿ ಎಸ್.ರವೀಂದ್ರ ಭಟ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠದ ಎದುರು ವಕ್ಫ್ ಮಂಡಳಿ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ, ಕಪಿಲ್ ಸಿಬಲ್ ‘ಈ ವಿಚಾರವನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು’ ಎಂದು ಮನವಿ ಮಾಡಿದರು. ಪ್ರಕರಣದ ವಿಚಾರಣೆಯನ್ನು ಮಂಗಳವಾರ ನಡೆಸಲು ಪೀಠವು ಸಮ್ಮತಿ ವ್ಯಕ್ತಪಡಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್, ‘ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಅರ್ಜಿಗಳನ್ನು ಸರ್ಕಾರ ಪರಿಗಣಿಸಬಹುದು ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. ಈದ್ಗಾ ಮೈದಾನದಲ್ಲಿ ಆರು ದಶಕಗಳಿಂದ ಮುಸ್ಲಿಮರು ಪ್ರಾರ್ಥನೆ ಮಾಡುತ್ತಿದ್ದಾರೆ. ಒಂದು ವೇಳೆ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಿದರೆ ಧಾರ್ಮಿಕ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಂತೆ ಆಗುತ್ತದೆ’ ಎಂದು ಎಚ್ಚರಿಸಿದರು. ‘ಪ್ರಕರಣದ ವಿಚಾರಣೆಯನ್ನು ಮಂಗಳವಾರ ನಡೆಸದಿದ್ದರೆ ಅನಗತ್ಯ ಉದ್ವಿಗ್ನತೆ ಸೃಷ್ಟಿಯಾಗಲಿದೆ’ ಎಂದೂ ಹೇಳಿದರು.
ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರು ರಮ್ಜಾನ್ ಮತ್ತು ಬಕ್ರೀದ್ ದಿನದಂದು ಮೈದಾನದಲ್ಲಿ ಪಾರ್ಥನೆ ಸಲ್ಲಿಸಬಹುದು. ಈ ಎರಡು ದಿನಗಳನ್ನು ಹೊರತು ಪಡಿಸಿ ಬೇರಾವುದೇ ದಿನ ಪ್ರಾರ್ಥನೆಗೆ ಅವಕಾಶ ಇರುವುದಿಲ್ಲ. ಬಿಬಿಎಂಪಿ ಮತ್ತು ಸರ್ಕಾರ ಮೈದಾನದಲ್ಲಿ ಗಣರಾಜೋತ್ಸವ ಮತ್ತು ಸ್ವಾತಂತ್ರ್ಯ ದಿನಾಚಣೆ ಆಚರಣೆಗೆ ಅನುಮತಿ ನೀಡಬಹುದು ಮತ್ತು ಮೈದಾನವನ್ನು ಆಟದ ಬಳಕೆಗೆ ಮಾತ್ರವೇ ಸೀಮಿತಗೊಳಿಸಬೇಕು’ ಎಂದು ಏಕಸದಸ್ಯ ನ್ಯಾಯಪೀಠ ಆದೇಶಿಸಿತ್ತು.