ಹಿರಿಯ ಸಾಹಿತಿ ಚಂಪಾ ನಿಧನ

Prasthutha|

- Advertisement -

ಬೆಂಗಳೂರು: ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಅವರಿಗೆ 83 ವರ್ಷ ವಯಸ್ಸಾಗಿತ್ತು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಚಂಪಾ ಅವರು 2017ರಲ್ಲಿ ಮೈಸೂರಿನಲ್ಲಿ ನಡೆದಿದ್ದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

- Advertisement -

ಬಂಡಾಯ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದ ಅವರು ಕನ್ನಡ ನಾಡು-ನುಡಿಗಾಗಿ ಹೋರಾಟ ನಡೆಸಿದ್ದರು. ಕರ್ನಾಟಕ ರಾಜ್ಯೋತ್ಸವ, ಬಸವಶ್ರೀ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದರು.

ಧಾರವಾಡ ಮೂಲದ ಚಂಪಾ ಅವರು ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು. ಮೂಲತಃ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು ಕನ್ನಡ ವಿಮರ್ಶಾ ಕ್ಷೇತ್ರ, ನಾಟಕ ರಚನೆಯಲ್ಲಿ ಪ್ರಸಿದ್ಧಿ ಪಡೆದಿದ್ದರು. ಅವರು ರಚಿಸಿದ ನಾಟಕಗಳು ನಾಡಿನಲ್ಲಿ – ಹೊರನಾಡು – ವಿದೇಶಗಳಲ್ಲಿಯೂ ಪ್ರದರ್ಶಿತವಾಗಿವೆ. ಅವರ ವಿಮರ್ಶೆಯೆಂದರೆ ಬಹು ಹರಿತ ಎಂದೇ ಖ್ಯಾತವಾಗಿತ್ತು.

ಸುದೀರ್ಘ ಅವಧಿ ಅವರು “ಸಂಕ್ರಮಣ” ಹೆಸರಿನ ಸಾಹಿತ್ಯ ಪತ್ರಿಕೆಯ ಸಂಪಾದಕರು- ಪ್ರಕಾಶಕರೂ ಆಗಿದ್ದರು.

ಗೋಕಾಕ್ ಚಳವಳಿಯಲ್ಲಿಯೂ ಮುಂಚೂಣಿಯಲ್ಲಿ ಕೆಲಸ ಮಾಡಿದ್ದ ಚಂಪಾ ಅವರು ಕನ್ನಡಕ್ಕೆ ಎಲ್ಲಿಯೇ ಅನ್ಯಾಯವಾದರೂ ಧ್ವನಿ ಎತ್ತುತ್ತಿದ್ದರು.

ಖ್ಯಾತ ಸಾಹಿತಿ ಚಂಪಾ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂತಾಪ

ಚಂಪಾ ಎಂದೇ ಖ್ಯಾತರಾಗಿದ್ದ ಖ್ಯಾತ ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

‘ಚಂದ್ರಶೇಖರ ಪಾಟೀಲರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ನಾಡಿನ ಭಾಷೆ, ಸಾಹಿತ್ಯ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದವರು ಚಂಪಾ.

ಅವರು ಕ್ರಾಂತಿಕಾರಿ ಸಾಹಿತಿ ಮಾತ್ರವಲ್ಲದೇ, ವಿಮರ್ಶಕರು, ನಾಟಕಕಾರರು ಹಾಗೂ ಕವಿಗಳಾಗಿದ್ದರು. ರಾಜ್ಯದ ನಾಡು, ನುಡಿಗೆ ಅವರ ಸೇವೆ ಅವಿಸ್ಮರಣೀಯ. ಅವರ ಅಗಲಿಕೆ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ.

ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು, ಅಭಿಮಾನಿ ಬಳಗ ಭಗವಂತ ನೀಡಲಿ ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಚಂಪಾ ಅವರ ನಿಧನಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಂಬನಿ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ವಿಶ್ರಾಂತ ಅಧ್ಯಕ್ಷ ಹಾಗೂ ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಕನ್ನಡಪರ ಹೋರಾಟಗಾರ, ಕವಿ, ನಾಟಕಕಾರ, ಸಂಘಟನಕಾರ, ಪತ್ರಕರ್ತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ವಿಶ್ರಾಂತ ಅಧ್ಯಕ್ಷರು ಆಗಿದ್ದ ಶ್ರೀ ಚಂದ್ರಶೇಖರ ಪಾಟೀಲ ಅವರ ನಿಧನ ಬಹಳ ದುಃಖ ಉಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಕಂಬನಿ ಮಿಡಿದಿದ್ದಾರೆ.

ಚಂಪಾ ಎಂದೇ ಸಾರಸ್ವತ ಲೋಕದಲ್ಲಿ ಹೆಸರಾಗಿದ್ದ ಅವರು ಸಾಹಿತ್ಯ ಕೃಷಿಯ ಜತೆಗೆ ನಾಡು, ನುಡಿ, ನೆಲಕ್ಕಾಗಿ ತಮ್ಮ ಬದುಕನ್ನು ಮೀಸಲಿಟ್ಟಿದ್ದರು. ಚಂಪಾ ಅವರ ಅಗಲಿಕೆ ನಾಡಿಗೆ ದೊಡ್ಡ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದ ಸದಸ್ಯರು, ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಕುಮಾರಸ್ವಾಮಿ ಅವರು ಪ್ರಾರ್ಥಿಸಿದ್ದಾರೆ.

Join Whatsapp