ನವದೆಹಲಿ: ಛಾವ್ಲಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಅನುಮೋದನೆ ನೀಡಿದ್ದಾರೆ.
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಹೆಚ್ಚುವರಿ ಎಸ್’ಜಿ ಐಶ್ವರ್ಯಾ ಭಾಟಿ ಅವರನ್ನು ಈ ಪ್ರಕರಣದಲ್ಲಿ ಉನ್ನತ ನ್ಯಾಯಾಲಯದ ಮುಂದೆ ಸರ್ಕಾರದ ಪರವಾಗಿ ವಕಾಲತ್ತು ವಹಿಸಲು ಸಕ್ಸೇನಾ ಅನುಮೋದನೆ ನೀಡಿದ್ದಾರೆ.
ಚಾವ್ಲಾ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಪೋಷಕರು ಎಲ್ಲಾ ಮೂವರು ಆರೋಪಿಗಳನ್ನು ಖುಲಾಸೆಗೊಳಿಸುವುದರ ವಿರುದ್ಧ ಮರುಪರಿಶೀಲನಾ ಅರ್ಜಿ ಸಲ್ಲಿಸುವಂತೆ ದೆಹಲಿ ವಿಕೆ ಸಕ್ಸೇನಾ ಅವರನ್ನು ಭೇಟಿ ಮಾಡಿ ವಿನಂತಿಸಿದ್ದರು.
ಫೆಬ್ರವರಿ 9, 2012 ರಂದು ರಾಷ್ಟ್ರ ರಾಜಧಾನಿಯ ದ್ವಾರಕಾದ ಚಾವ್ಲಾ ಪ್ರದೇಶದಲ್ಲಿ ಉತ್ತರಾಖಂಡದ ಪೌರಿಯಿಂದ 19 ವರ್ಷದ ಬಾಲಕಿಯನ್ನು ಮೂವರು ವ್ಯಕ್ತಿಗಳು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನವೆಂಬರ್ 7 ರಂದು ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿತು. ಈ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ದೆಹಲಿ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿತ್ತು.