ಬೆಂಗಳೂರು: ಮತದಾರರ ಡಾಟಾ ಕಳವಿಗೆ ಮುಖ್ಯಮಂತ್ರಿ ಬೊಮ್ಮಾಯಿಯೇ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ.
‘ಖಾಸಗಿ ಸಂಸ್ಥೆಯೊಂದಕ್ಕೆ ಮತದಾರರ ಪಟ್ಟಿ ಪರಿಷ್ಕರಣೆಯ ಅನುಮತಿ ನೀಡಿ, ಮತದಾರರ ಮಾಹಿತಿ ಕಳವಿಗೆ ಬೆಂಗಳೂರು ಉಸ್ತುವಾರಿ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರಣರಾಗಿದ್ದಾರೆ’ ಎಂದು ಆರೋಪಿಸಿರುವ ಪ್ರತಿಪಕ್ಷ ಕಾಂಗ್ರೆಸ್, ‘ಮುಖ್ಯಮಂತ್ರಿ ಸ್ಥಾನಕ್ಕೆ ಅವರು ತಕ್ಷಣ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದೆ.
‘ಮುಖ್ಯಮಂತ್ರಿ ವಿರುದ್ಧ ಎಫ್ಐಆರ್ ದಾಖಲಿಸಿ, ಬಂಧಿಸಬೇಕು. ಇಡೀ ಪ್ರಕರಣದ ಬಗ್ಗೆ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು’ ಎಂದೂ ಒತ್ತಾಯಿಸಿರುವ ಕಾಂಗ್ರೆಸ್ ನಾಯಕರು, ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದಾರೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ‘ಚಿಲುಮೆ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಗೆ ಮತದಾರರ ಜಾಗೃತಿ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆಗೆ ಇದೇ ಆ. 20ರಂದು ಅನುಮತಿ ನೀಡಲಾಗಿತ್ತು. ಈ ಸಂಸ್ಥೆಯವರು ಮತದಾರರ ಮಾಹಿತಿ ಪಡೆಯಲು ತಮ್ಮ ಸಿಬ್ಬಂದಿಗೆ ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಎಂಬ ಗುರುತಿನ ಚೀಟಿ ನೀಡಿದ್ದಾರೆ. ಸರ್ಕಾರಿ, ಅರೆ ಸರ್ಕಾರಿ ಸಿಬ್ಬಂದಿ ಹೊರತಾಗಿ ಬೇರೆಯವರು ಬಿಎಲ್ಒ ಆಗಲು ಸಾಧ್ಯವಿಲ್ಲ’ ಎಂದರು.