ದಿನದ ಕೆಲಸದ ಅವಧಿ 3 ಗಂಟೆ ಹೆಚ್ಚಳ: ಮಾರ್ಚ್ 1 ರಂದು ರಾಜ್ಯವ್ಯಾಪಿ ಪ್ರತಿಭಟನೆಗೆ ಸಿಐಟಿಯು ಕರೆ

Prasthutha|

ಬೆಂಗಳೂರು: ಕಾರ್ಖಾನೆಗಳಲ್ಲಿ ದಿನದ ಕೆಲಸದ ಅವಧಿಯನ್ನು ಗರಿಷ್ಠ 9 ಗಂಟೆಯಿಂದ 12 ಗಂಟೆಗೆ ಹೆಚ್ಚಿಸಿ ಮತ್ತು ದುಡಿಯುವ ಮಹಿಳೆಯರನ್ನು ರಾತ್ರಿ ಪಾಳಿಯಲ್ಲಿ ದುಡಿಸಿಕೊಳ್ಳಲು ಅವಕಾಶ ಕಲ್ಪಿಸಿ ಕಾರ್ಖಾನೆ ಕಾಯ್ದೆ – 1948ಕ್ಕೆ ತಿದ್ದುಪಡಿ ಮಾಡಿ, ಕಾರ್ಖಾನೆಗಳ (ಕರ್ನಾಟಕ ತಿದ್ದುಪಡಿ) ವಿಧೇಯಕ 2023 ನ್ನು ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆದಿದೆ. ಇದು ಕಾರ್ಮಿಕ ವಿರೋಧಿಯಾಗಿದ್ದು, ಚುನಾವಣೆ ಹೊಸ್ತಿಲಲ್ಲಿ ಬಂಡವಾಳಗಾರರನ್ನು ಓಲೈಸುವ ಕ್ರಮವಾಗಿದೆ ಎಂದಿರುವ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್(ಸಿಐಟಿಯು), ಈ ತಿದ್ದುಪಡಿ ವಿಧೇಯಕವನ್ನು ತೀವ್ರವಾಗಿ ವಿರೋಧಿಸಿದೆ.

- Advertisement -


ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಸಿಐಟಿಯು ರಾಜ್ಯ ಅಧ್ಯಕ್ಷೆ ಎಸ್. ವರಲಕ್ಷ್ಮಿ ಅವರು, ಕೂಡಲೇ ಈ ವಿಧೇಯಕವನ್ನು ವಾಪಸ್ಸು ಪಡೆಯಬೇಕೆಂದು ರಾಜ್ಯ ಸರ್ಕಾರವನ್ನು ಸಿಐಟಿಯು ಒತ್ತಾಯಿಸುತ್ತದೆ. ಸರ್ಕಾರದ ಈ ಕಾರ್ಮಿಕ ವಿರೋಧಿ ವಿಧೇಯಕವನ್ನು ವಿರೋಧಿಸಿ ಮಾರ್ಚ್ 1ರಂದು ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದರು.
ಫೆಬ್ರವರಿ 28 ರಂದು ಎಲ್ಲಾ ಕಾರ್ಖಾನೆಗಳ ದ್ವಾರದ ಬಳಿ ಕಾರ್ಮಿಕರಿಂದ ವಿಧೇಯಕ ಪ್ರತಿದಹನ ಮತ್ತು ಮಾರ್ಚ್ 1 ರಂದು ರಾಜ್ಯವ್ಯಾಪಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗೆ ಸಿಐಟಿಯು ಕರ್ನಾಟಕ ರಾಜ್ಯ ಸಮಿತಿ ಕರೆ ನೀಡಿದೆ ಎಂದು ಅವರು ತಿಳಿಸಿದರು.


ಪ್ರಸ್ತುತ ಕಾಯ್ದೆಯಲ್ಲಿ ದಿನದ ಕೆಲಸದ ಅವಧಿಯ ಆರಂಭದಿಂದ ಗರಿಷ್ಠ 5 ಗಂಟೆಗೆ 30 ನಿಮಿಷ ವಿರಾಮವನ್ನು ನೀಡಬೇಕು. ಆದರೆ ಈ ತಿದ್ದುಪಡಿ ವಿಧೇಯಕದಲ್ಲಿ ವಿರಾಮವಿಲ್ಲದೆ ದುಡಿಮೆ ಮಾಡುವ ಅವಧಿ ಗರಿಷ್ಠ 5 ಗಂಟೆಯಿಂದ 6 ಗಂಟೆಗೆ ಹೆಚ್ಚಿಸಲಾಗಿದೆ. ಹಾಗೂ ಕಾರ್ಮಿಕರ ದಿನದ ಕೆಲಸದ ಗರಿಷ್ಠ ಅವಧಿ 9 ಗಂಟೆಯಿಂದ 12 ಗಂಟೆಗೆ ಹೆಚ್ಚಿಸಲಾಗಿದೆ. ಇದು ಕಾರ್ಮಿಕರ ಶೋಷಣೆಗೆ ಮತ್ತಷ್ಟು ಅವಕಾಶ ಕಲ್ಪಿಸಿದೆ. ರಾಜ್ಯ ಬಿಜೆಪಿ ಸರ್ಕಾರದ ಇಂತಹ ಧೋರಣೆ ಖಂಡನೀಯ ಎಂದು ಎಸ್. ವರಲಕ್ಷ್ಮಿ ತಿಳಿಸಿದರು.

- Advertisement -


ಪ್ರಸ್ತುತ ಉದ್ಯೋಗದ ಕಡಿತ, ಕಡಿಮೆ ವೇತನಕ್ಕೆ ದುಡಿಮೆ, ಅಧಿಕ ಉತ್ಪಾದನೆ ಮಾಡಿಸಿಕೊಳ್ಳುವುದು ಹೆಚ್ಚಾಗಿದೆ. ಈ ತಿದ್ದುಪಡಿಗಳು ಕಾರ್ಮಿಕರ ಮೇಲೆ ವಿರಾಮವಿಲ್ಲದೆ ಅಧಿಕ ಉತ್ಪಾದನೆ ಮಾಡಬೇಕೆನ್ನುವ ಒತ್ತಡ, ಶೋಷಣೆ ಹೆಚ್ಚಿಸಲಿದೆ. ಹಲವು ಕಾರ್ಖಾನೆಗಳ ಮಾಲಿಕರಿಗೆ 6 ದಿನಗಳಲ್ಲಿ ಆಗುತ್ತಿದ್ದ ಉತ್ಪಾದನೆ 4 ದಿನಗಳಲ್ಲೇ ಕಾರ್ಮಿಕರ ಶ್ರಮದ ಶೋಷಣೆಯಿಂದ ಸಿಗಲಿದೆ. ಮೂರು ಶಿಫ್ಟ್’ಗಳಿಗೆ ಒದಗಿಸಬೇಕಾದ ಸಾರಿಗೆ ಸೌಲಭ್ಯ ಹಾಗೂ ಕ್ಯಾಂಟೀನ್ ಮತ್ತು ಇನ್ನಿತರ ಸೌಲಭ್ಯಗಳನ್ನು ಉಳಿಸಲು ಇದು ಅವಕಾಶ ಕಲ್ಪಸುತ್ತದೆ. ಚಾರಿತ್ರಿಕ 8 ಗಂಟೆ ಕೆಲಸ 8 ಗಂಟೆ ವಿರಾಮ ಮತ್ತು 8 ಗಂಟೆ ಮನೋರಂಜನೆ ಎಂಬ ಜೀವಪರ ತಾತ್ವಿಕ ನೆಲೆಯನ್ನು ಕಳಚಿ ಹಾಕಿ ಬಂಡವಾಳಕ್ಕೆ ಲಾಭ ಮಾಡಿಕೊಡುವ ನವಉದಾರವಾದಿ ಆರ್ಥಿಕ ನೀತಿಯ ಜಾರಿಯ ನಿಟ್ಟಿನಲ್ಲಿ ಬಿಜೆಪಿ ಸಕಾ೯ರವು ಈ ತಿದ್ದುಪಡಿಗೆ ಕ್ರಮ ವಹಿಸಿದೆ ಎಂದು ಅವರು ಟೀಕಿಸಿದರು.


ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಅವರು, ದುಡಿಯುವ ಮಹಿಳೆಯರ ಸುರಕ್ಷತೆ, ಕೆಲಸದ ಭದ್ರತೆ, ಸಾರಿಗೆ, ಸೇವಾ ಸೌಲಭ್ಯಗಳಿಂದ ಮಹಿಳಾ ಕಾರ್ಮಿಕರು ವಂಚಿತರಾಗಿದ್ದಾರೆ. ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಕಿರುಕುಳ ಹೆಚ್ಚಾಗಿದೆ. ಕಡಿಮೆ ವೇತನಕ್ಕೆ ದುಡಿಸಿಕೊಳ್ಳಲಾಗುತ್ತಿದ್ದು, ಕೆಲಸದ ಅಭದ್ರತೆಯಿಂದಾಗಿ ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ ಎಂದಿದ್ದಾರೆ.
ಹೀಗಿರುವಾಗ ಮಹಿಳಾ ಕಾರ್ಮಿಕರನ್ನು ರಾತ್ರಿಪಾಳಿಯಲ್ಲಿ ದುಡಿಮೆ ಮಾಡಿಕೊಳ್ಳಲು ಕಾರ್ಖಾನೆ ಮಾಲೀಕರಿಗೆ ಅನುವುಗೊಳಿಸಿ ತಿದ್ದುಪಡಿ ಮಾಡಿರುವುದು ಮಹಿಳಾ ಕಾರ್ಮಿಕರನ್ನು ದುಡಿಮೆಯಿಂದ ಹೊರಗಿಡುವ ಹುನ್ನಾರವಾಗಿದೆ ಎಂದು ಸಿಐಟಿಯು ರಾಜ್ಯ ಸಮಿತಿ ಪ್ರಕಟಿಸಿದೆ.


ಈ ಹಿಂದೆ ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಸರ್ಕಾರ 2020 ರಲ್ಲಿ ಕಾರ್ಮಿಕ ವಿರೋಧಿಯಾಗಿ ಈ ಕಾಯ್ದೆಗೆ ತಿದ್ದುಪಡಿಯನ್ನು ಮಾಡಿ ಸುಗ್ರೀವಾಜ್ಞೆ ಹೊರಡಿಸಲಾಗಿತ್ತು. ಈ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ ಮಾಡಿದರು ಕಾರ್ಮಿಕರ ತೀವ್ರ ವಿರೋಧದಿಂದಾಗಿ ವಿಧಾನ ಪರಿಷತ್ತಿನಲ್ಲಿ ಸೋಲಾಗಿತ್ತು. ಈಗ ಬಿಜೆಪಿ ಸರ್ಕಾರ ಚುನಾವಣೆ ಹೊಸ್ತಿಯಲ್ಲಿ ಬಂಡವಾಳಗಾರರ ಲಾಭವನ್ನು ಹೆಚ್ಚಿಸಲು ಈ ತಿದ್ದುಪಡಿ ವಿಧೇಯಕವನ್ನು ಶಾಸನಸಭೆಯಲ್ಲಿ ಅಂಗೀಕಾರ ಮಾಡಿರುವುದು ಕಾರ್ಮಿಕ ವಿರೋಧಿ ನಡೆಯಾಗಿದೆ ಸಿಐಟಿಯು ಹೇಳಿದೆ.
ಕಾರ್ಖಾನೆಗಳಲ್ಲಿ ಹೊಸ ಉದ್ಯೋಗ ಅವಕಾಶಗಳ ಸೃಷ್ಟಿ, ಕಾರ್ಮಿಕರ ಮೇಲೆ ಅಧಿಕ ಉತ್ಪಾದನೆ ಮಾಡಬೇಕೆನ್ನುವ ಒತ್ತಡಗಳನ್ನು ಕಡಿಮೆ ಮಾಡಲು, ಕಾರ್ಮಿಕರ ಜೀವನವನ್ನು ಉತ್ತಮಪಡಿಸಲು ‘ವಾರಕ್ಕೆ 5 ದಿನ ಕೆಲಸ, ದಿನಕ್ಕೆ 7 ಗಂಟೆ, ವಾರಕ್ಕೆ 35 ಗಂಟೆ ಕೆಲಸದ ಅವಧಿ’ ನಿಗದಿಪಡಿಸಿ ಕಾಯ್ದೆಗೆ ತಿದ್ದುಪಡಿ ಮಾಡಬೇಕೆಂದು ಹಾಗೂ ಕಾರ್ಮಿಕ ವಿರೋಧಿ ತಿದ್ದುಪಡಿಗಳನ್ನು ಒಳಗೊಂಡಿರುವ ಕಾರ್ಖಾನೆಗಳ (ಕರ್ನಾಟಕ ತಿದ್ದುಪಡಿ) ವಿಧೇಯಕ 2023 ನ್ನು ವಾಪಸ್ಸು ಪಡೆಯಬೇಕೆಂದು ಸಿಐಟಿಯು ಒತ್ತಾಯಿಸಿದೆ.

Join Whatsapp