Home ಟಾಪ್ ಸುದ್ದಿಗಳು ಜಾರಕಿಹೊಳಿ ಬ್ಲ್ಯಾಕ್‌ ಮೇಲ್‌ ಪ್ರಕರಣ: ಆರೋಪಿತ ಪತ್ರಕರ್ತರ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿದ ನ್ಯಾಯಾಲಯ

ಜಾರಕಿಹೊಳಿ ಬ್ಲ್ಯಾಕ್‌ ಮೇಲ್‌ ಪ್ರಕರಣ: ಆರೋಪಿತ ಪತ್ರಕರ್ತರ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿದ ನ್ಯಾಯಾಲಯ

ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಆಪ್ತರೊಬ್ಬರು ಹೂಡಿರುವ ಬ್ಲ್ಯಾಕ್‌ಮೇಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನರೇಶ್‌ ಗೌಡ ಮತ್ತು ಶ್ರವಣ್‌ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಮನವಿಯ ವಿಚಾರಣೆಯನ್ನು ಸೋಮವಾರ ನಡೆಸಿದ ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯವು ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

ಆಕ್ಷೇಪಣೆ ಸಲ್ಲಿಸಲು ವಿಫಲವಾದ ಪ್ರಾಸಿಕ್ಯೂಷನ್‌ ಪರ ವಕೀಲ ಕಿರಣ್‌ ಜವಳಿ ಅವರನ್ನು ನ್ಯಾಯಮೂರ್ತಿ ಲಕ್ಷ್ಮಿನಾರಾಯಣ್‌ ಭಟ್‌ ಅವರಿದ್ದ ಪೀಠವು ತರಾಟೆಗೆ ತೆಗೆದುಕೊಂಡಿತು. ಕೋವಿಡ್‌ ಹಿನ್ನೆಲೆಯಲ್ಲಿ ಶನಿವಾರ ನ್ಯಾಯಾಲಯಕ್ಕೆ ರಜೆ ನೀಡಲಾಗಿದ್ದು, ಇಂದು ಆಕ್ಷೇಪಣೆ ಸಲ್ಲಿಸಲು ಪ್ರಾಸಿಕ್ಯೂಷನ್‌ಗೆ ಅವಕಾಶ ಕಲ್ಪಿಸಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಆಕ್ಷೇಪಣೆ ಸಲ್ಲಿಸುವಂತೆ ಪ್ರಾಸಿಕ್ಯೂಷನ್‌ಗೆ ನ್ಯಾಯಾಲಯ ನಿರ್ದೇಶಿಸಿದ್ದು, ವಿಚಾರಣೆಯನ್ನು ಮುಂದೂಡಿತು.

ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ತೇಜೋವಧೆ ಮಾಡುವ ಉದ್ದೇಶದಿಂದ ನಕಲಿ ಸಿಡಿ ಸೃಷ್ಟಿಸಿ, ಬ್ಲ್ಯಾಕ್‌ ಮೇಲ್‌ ಮತ್ತು ವಂಚನೆ ಮಾಡಲಾಗಿದೆ ಎಂದು ಜಾರಕಿಹೊಳಿ ಆಪ್ತ ಎನ್ನಲಾದ ನಾಗರಾಜ್‌ ಎಂಬವರು ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಕಳೆದ ಮಾರ್ಚ್‌ನಲ್ಲಿ ದೂರು ದಾಖಲಿಸಿದ್ದರು.

ಆರೋಪಿಗಳಿಬ್ಬರು ಈ ಹಿಂದೆ ಕನ್ನಡದ ಖಾಸಗಿ ಸುದ್ದಿ ವಾಹಿನಿಯಲ್ಲಿ ಪತ್ರಕರ್ತರಾಗಿ ಗುರುತಿಸಿಕೊಂಡಿದ್ದರು.

Join Whatsapp
Exit mobile version