ಬೆಂಗಳೂರು, ಜು.12 : ರಾಜ್ಯದಲ್ಲಿ ಅವಧಿ ಮುಗಿದಿರುವ ಮಹಾನಗರ ಪಾಲಿಕೆಗಳ ಚುನಾವಣೆಯನ್ನು ನಡೆಸಬೇಕೆಂಬುದು ಸರ್ಕಾರದ ಅಭಿಲಾಷೆ ಆಗಿದ್ದು, ಕೊರೊನಾ ಸ್ಥಿತಿಗತಿ ನೋಡಿಕೊಂಡು ಸೂಕ್ತ ವೇಳೆಯಲ್ಲಿ ಚುನಾವಣೆ ನಡೆಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೊರೋನಾ ಹಿನ್ನೆಲೆಯಲ್ಲಿ ಪಾಲಿಕೆಗಳ ಚುನಾವಣೆಗೆ ಹಿನ್ನಡೆಯಾಗಿತ್ತು. ಇದೀಗ ಕೊರೋನಾ ಸೋಂಕು ಕಡಿಮೆಯಾಗುತ್ತಿದ್ದು, ಸೂಕ್ತ ಸಮಯ ನೋಡಿಕೊಂಡು ಬೆಳಗಾವಿ, ವಿಜಯಪುರ, ಗುಲ್ಬರ್ಗಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಚುನಾವಣೆ ನಡೆಸಲಾಗುವುದು ಎಂದು ಹೇಳಿದರು.
ಈಗಾಗಲೇ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಾರ್ಡ್ ಮೀಸಲಾತಿ ಪ್ರಕಟ ಮಾಡಲಾಗಿದೆ. ಈ ಬಗ್ಗೆ ಸಾರ್ವಜನಿಕರಿಗೆ ಆಕ್ಷೇಪಣೆಗಳಿದ್ದರೆ ಸಲ್ಲಿಸಲು ಕಾಲಾವಕಾಶ ನೀಡಲಾಗಿದ್ದು, ಇದೀಗ ಮುಂದಿನ ತೀರ್ಮಾನ ಮಾಡಲಾಗುವುದು ಎಂದು ಸಚಿವ ಬೈರತಿ ಬಸವರಾಜ ತಿಳಿಸಿದರು.