ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೋವಿಡ್ ನಿಂದ ಗುಣಮುಖರಾಗುತ್ತಿದ್ದಾರೆ.
ಇಂದು ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಗಾಗಿ ಮತ್ತು ಪೂರ್ಣಗೊಂಡ ಕಾಮಗಾರಿಗಳಿಗೆ ಚಾಲನೆ ನೀಡಲು ಮೈಸೂರು, ಮಂಡ್ಯ ಜಿಲ್ಲೆಗಳ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಂಗಳೂರಿನಿಂದ ಇಂದು ಮುಂಜಾನೆ ಎಚ್ಎಎಲ್ ವಿಮಾನ ನಿಲ್ದಾಣದ ಮೂಲಕ ಹೆಲಿಕಾಪ್ಟರ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮೈಸೂರಿಗೆ ತೆರಳಲಿದ್ದಾರೆ.
ಅಲ್ಲಿ ಮೈಸೂರು ವಿಶ್ವವಿದ್ಯಾಲಯ ಆಯೋಜಿಸಿರುವ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಯುವಜನ ಮಹೋತ್ಸವ ಹಾಗೂ ವಿಶ್ವವಿದ್ಯಾಲಯದ ಇಂಜಿನಿಯರಿಂಗ್ ಕಾಲೇಜು ಮತ್ತು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮಾಡಲಿದ್ದಾರೆ. ನಂತರ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ ರಸ್ತೆ ಮೂಲಕ ಮೈಸೂರಿನಿಂದ ಮಂಡ್ಯ ಜಿಲ್ಲೆಗೆ ತೆರಳಲಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರು ಮಂಡ್ಯ ವಿಶ್ವವಿದ್ಯಾಲಯ ಮತ್ತು ಜಿಲ್ಲಾಡಳಿತದ ವತಿಯಿಂದ ಆಯೋಜಿಸಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಜರುಗಲಿರುವ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ- ಸಂಜೀವಿನಿ ಸಂಸ್ಥೆಯ ಜೀವನೋಪಾಯ ವರ್ಷಾಚರಣೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ತದನಂತರ ಮದ್ದೂರು ತಾಲೂಕಿನ ಭಾರತಿ ನಗರದಲ್ಲಿರುವ ಭಾರತಿ ಎಜುಕೇಶನ್ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಭಾರತಿ ವಜ್ರ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಇದಾದ ಬಳಿಕ ರಸ್ತೆ ಮೂಲಕ ಮುಖ್ಯಮಂತ್ರಿಗಳು ಬೆಂಗಳೂರು ನಗರಕ್ಕೆ ವಾಪಸಾಗಲಿದ್ದಾರೆ.