ಮೈಸೂರು: ಮಳೆ ಹಾನಿಗೆ ಸಂಬಂಧಿಸಿದಂತೆ ಈಗಾಗಲೇ ವರದಿ ಪಡೆಯಲಾಗಿದ್ದು, ಸದ್ಯದಲ್ಲೇ ಅನುದಾನ ಬಿಡುಗಡೆಗೆ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೈಸರ್ಗಿಕ ವಿಕೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೊದಲ ಕಂತಿನ ಅನುದಾನ ಬಿಡುಗಡೆ ಮಾಡಲಾಗಿದೆ. ರಸ್ತೆ ಮತ್ತು ಸೇತುವೆ ಹಾನಿಗೆ ಸಂಬಂಧಿಸಿದಂತೆ ವರದಿ ತರಿಸಿಕೊಂಡು 500 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಕಳೆದ ಬಾರಿ 14.50 ಲಕ್ಷ ರೈತರಿಗೆ ಒಂದೂವರೆ ತಿಂಗಳಲ್ಲೇ ಪರಿಹಾರ ನೀಡಲಾಗಿತ್ತು. ಅದೇ ರೀತಿ ಈ ಬಾರಿಯೂ ಕೂಡ ಪರಿಹಾರ ವಿತರಿಸಲಾಗುವುದು ಎಂದರು.
ಒಮಿಕ್ರಾನ್ ರೂಪಾಂತರ ಕುರಿತು ತಜ್ಞರು ಪರೀಕ್ಷೆ ನಡೆಸುತ್ತಿದ್ದಾರೆ. ತಜ್ಞರು ನೀಡುವ ವರದಿಗಳ ಆಧಾರದ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಸದ್ಯಕ್ಕೆ ಯಾರೂ ಅದರ ಬಗ್ಗೆ ಆತಂಕ ಪಡುವುದು ಬೇಡ ಎಂದರು.