Home ಟಾಪ್ ಸುದ್ದಿಗಳು ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ

ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ

ಬೆಂಗಳೂರು : ಕಾನೂನು ಸುವ್ಯವಸ್ಥೆಗೆ ಎದುರಾಗಿರುವ ಸವಾಲುಗಳನ್ನು ಅತ್ಯಂತ ದಕ್ಷತೆಯಿಂದ ನಿರ್ವಹಣೆ ಮಾಡಬೇಕು. ಜನತೆ ಶಾಂತಿ ಮತ್ತು ನೆಮ್ಮದಿಯಿಂದ ಜೀವನ ನಡೆಸುವ ವಾತಾವರಣ ಸೃಷ್ಟಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿಂದು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮುಂಬರುವ ಕೋವಿಡ್ ಸವಾಲುಗಳು, ನ್ಯಾಯಾಲಯಗಳ ಆದೇಶ ಪರಿಪಾಲನೆ ಸಂದರ್ಭದಲ್ಲಿ ಪೊಲೀಸರು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಅಪರಾಧ ಪ್ರಕರಣಗಳನ್ನು ಸಶಕ್ತವಾಗಿ ನಿಗ್ರಹಿಸಿ ಹತೋಟಿಗೆ ತರಬೇಕು. ಕಾನೂನು ಬಾಹಿರ ಚಟುವಟಿಕೆಗಳ ನಿರ್ವಹಣೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ನಿರ್ದೇಶನ ನೀಡಿರುವುದಾಗಿ ತಿಳಿಸಿದರು.

ಪೊಲೀಸ್ ವ್ಯವಸ್ಥೆಯಲ್ಲಿ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಲು ಆದ್ಯತೆ ನೀಡಲಾಗುತ್ತಿದೆ. ವಿಧಿ ವಿಜ್ಞಾನ ಪ್ರಯೋಗಾಲಯವನ್ನು ಮೇಲ್ದರ್ಜೆ ಗೇರಿಸಲಾಗುವುದು, ಕರ್ನಾಟಕ ಮೀಸಲು ಪೊಲೀಸ್ ಪಡೆ, ಅಗ್ನಿಶಾಮಕ ವಿಭಾಗಕ್ಕೆ ಹೆಚ್ಚಿನ ಸೌಲಭ್ಯ ಕಲ್ಪಿಸಲಾಗುವುದು. ಮಾದಕ ವಸ್ತುಗಳ ವಿರುದ್ಧದ ಹೋರಾಟ ಮುಂದುವರೆಯಲಿದ್ದು, ಎಲ್ಲಾ ಜಿಲ್ಲೆಗಳಲ್ಲೂ ಕಠಿಣ ನಿಗಾ ವಹಿಸುವಂತೆ ಸೂಚಿಸಲಾಗಿದೆ. ಆಂತರಿಕ ಭದ್ರತಾ ವಿಭಾಗವನ್ನು ಇನ್ನಷ್ಟು ಬಲಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪೊಲೀಸರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು, ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲಾಗುವುದು, ಇಲಾಖೆಯ ದಕ್ಷತೆಯನ್ನು ಹೆಚ್ಚಿಸುವುದು ಸರ್ಕಾರದ ಬದ್ಧತೆಯಾಗಿದೆ. ಒಟ್ಟಾರೆ ಪೊಲೀಸ್ ವ್ಯವಸ್ಥೆಯನ್ನು ಜನಸ್ನೇಹಿಯಾಗಿ ಪರಿವರ್ತಿಸಲು ಎಲ್ಲರ ಸಹಕಾರ ಅಗತ್ಯ ಎಂದರು.

Join Whatsapp
Exit mobile version