ಕೇರಳದಲ್ಲಿ ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆ: ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ

Prasthutha|

ಬೆಂಗಳೂರು,ಸೆ.31: ನೆರೆ ರಾಜ್ಯ ಕೇರಳದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಸೂಚನೆ ನೀಡಿದ್ದಾರೆ.

- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನೆರೆ ರಾಜ್ಯ ಕೇರಳದಲ್ಲಿ ಕೋವಿಡ್ ಸೋಂಕು ಮತ್ತೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇರಳ-ಕರ್ನಾಟಕ ಗಡಿಭಾಗದಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಂತೆಯೇ ಕೋವಿಡ್-19 ಪರಿಸ್ಥಿತಿ ಕುರಿತು ಗಡಿ ಜಿಲ್ಲೆಯ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ನಡೆಸಲಾಗುತ್ತಿದೆ. ಈ ವೇಳೆ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಚನೆಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಈಗಾಗಲೇ ರಾಜ್ಯದ ಗಡಿ ಪ್ರದೇಶಗಳಲ್ಲಿ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಲಾಗಿದೆ. ಕೊರೋನಾ ಪರೀಕ್ಷೆ ಹಾಗೂ ಲಸಿಕೆ ತೆಗೆದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ನಮ್ಮ ಸದ್ಯದ ಆದ್ಯತೆ ಕೊರೋನಾ ಸೋಂಕಿನ ಹರಡುವಿಕೆ ತಡೆಯುವುದಾಗಿದೆ ಎಂದಿದ್ದಾರೆ. ರಾಜ್ಯದಲ್ಲೂ ಏಕಾಏಕಿ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಜಿಲ್ಲೆ, ಚಾಮರಾಜನಗರ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.



Join Whatsapp