Home ಟಾಪ್ ಸುದ್ದಿಗಳು ಕರ್ನಾಟಕದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ

ಕರ್ನಾಟಕದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ

ಬೆಂಗಳೂರು: ಸುಳ್ಳು ಸುದ್ದಿಗಳು ಪ್ರಜಾಪ್ರಭುತ್ವಕ್ಕೆ ಬೆದರಿಕೆಯೊಡ್ಡುವುದರ ಜತೆಗೆ ಸಮಾಜದ ಧ್ರುವೀಕರಣಕ್ಕೆ ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಜತೆಗೆ, ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ (Fact Check) ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲಾ ನಿಯಮ ಮತ್ತು ಕಾನೂನು ರೂಪಿಸುವ ಪ್ರಯತ್ನಕ್ಕೆ ಅನುಮೋದನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸೈಬರ್ ಸುರಕ್ಷತೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಅವರು ಸುಳ್ಳು ಸುದ್ದಿಗಳ ಮತ್ತು ಸುಳ್ಳು ಸುದ್ದಿ ಸೃಷ್ಟಿಸುವ ಸಿಂಡಿಕೇಟ್​​ಗಳ ಪತ್ತೆ, ಸುಳ್ಳು ಸುದ್ದಿ ಪ್ರಸಾರಕ್ಕೆ ತಡೆ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂರು ಹಂತಗಳ ಕ್ರಮಕ್ಕೆ ಅನುಮೋದನೆ ನೀಡಿದರು.

ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ

ಫ್ಯಾಕ್ಟ್ ಚೆಕ್ ಘಟಕವು ಮೇಲುಸ್ತುವಾರಿ ಸಮಿತಿ, ಎಸ್​​ಒಪಿಸಿ ಪರಿಶೀಲನೆ, ನೋಡಲ್ ಅಧಿಕಾರಿಗಳ ನೇಮಕ ಸೇರಿದಂತೆ ಸತ್ಯ ತಪಾಸಣೆ ತಂಡ ವಿಶ್ಲೇಷಣ ತಂಡವನ್ನು ಒಳಗೊಳ್ಳಲಿದೆ. ಹಾಗೂ ಸಾಮರ್ಥ್ಯ ವರ್ಧನೆ ತಂಡ ರಚನೆ ಮಾಡಿ ವ್ಯವಸ್ಥಿತವಾಗಿ ತಂತ್ರಜ್ಞಾನ ಬಳಕೆ ಮಾಡಬಹುದು ಎಂದು ಸಭೆಯಲ್ಲಿ ವಿವರಿಸಲಾಯಿತು.

ಬೆಂಗಳೂರು ಪೊಲೀಸ್ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಿದ್ದರೂ, ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಅಗತ್ಯವಿದೆ. ಎಐ ಬಳಕೆ ಮಾಡಿ ಡೀಪ್ ಫೇಕ್ ಕೂಡ ಉಪಯೋಗ ಮಾಡಲಾಗುತ್ತಿದೆ. ಇದು ಸುಳ್ಳು ಸುದ್ದಿ ಹರಡುವವರಿಗೆ ಅನುಕೂಲವಾಗುತ್ತದೆ ಎಂದು ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು.

ಫೇಕ್ ಸುದ್ದಿ ಜಾಲ ಜಾಗತಿಕವಾಗಿ ಬಾಲ್ಯಾವಸ್ಥೆಯಲ್ಲಿದ್ದರೂ ಕಾಲಾಂತರದಲ್ಲಿ ವ್ಯಾಪಕವಾಗಿ ಬಳಕೆಯಾಗುವ ಸಾಧ್ಯತೆಯೂ ಇದೆ. ಸುಳ್ಳು ಸುದ್ದಿ ಬಳಕೆ ಮಾಡುವವರಿಗೆ ಶಿಕ್ಷೆ ಕೂಡ ಆಗಬೇಕು. ಈ ಸಮಿತಿ ಕೂಡಲೇ ರಚಿಸಿ ಸಾಮರ್ಥ್ಯ ಹೆಚ್ಚಿಸುವ ಕೆಲಸ ಆಗಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಅಭಿಪ್ರಾಯಪಟ್ಟರು.

ಸುಳ್ಳು ಸುದ್ದಿ ಗುರುತಿಸುವುದು, ಕಾನೂನು ಸುವ್ಯವಸ್ಥೆ ಕಾಪಾಡಲು ಇದು ಅತ್ಯಗತ್ಯ. ಆರಂಭಿಕ ಹಂತದಲ್ಲಿ ಐ.ಟಿ ಬಿಟಿ ಇಲಾಖೆ ಸಹಕರಿಸುತ್ತದೆ. ಕಾನೂನಿನ ವ್ಯಾಪ್ತಿಯಲ್ಲಿ ತರಲು ಕ್ರಮ ವಹಿಸಬೇಕು ನಂತರ ಘಟಕವು ಗೃಹ ಇಲಾಖೆಯ ವ್ಯಾಪ್ತಿಯಲ್ಲಿಯೇ ಇರುವುದು ಸೂಕ್ತ ಎಂದು ಸಚಿವ ಪ್ರಿಯಾಂಕ ಖರ್ಗೆ ಅಭಿಪ್ರಾಯಪಟ್ಟರು.

ಸಚಿವರಾದ ಕೃಷ್ಣಬೈರೇಗೌಡ ಅವರು ಮಾತನಾಡಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆಯಿಂದ ಸುಳ್ಳುಸುದ್ದಿ ಹರಡುವುದನ್ನು ನಿಯಂತ್ರಿಸಿ ಇದು ಶಿಕ್ಷಾರ್ಹ ಅಪರಾಧ ಎಂದು ಜನರಿಗೆ ಮನವರಿಕೆಯಾಗಬೇಕು ಎಂದರು.

ಸಭೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಉಪಸ್ಥಿತರಿದ್ದರು.

Join Whatsapp
Exit mobile version