ಪತ್ರ ಬರೆದು ಧನ್ಯವಾದ ತಿಳಿಸಿದ್ದ ವಿದ್ಯಾರ್ಥಿನಿಯನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

Prasthutha|

ಹುಬ್ಬಳ್ಳಿ: ರಾಜ್ಯ ಸರಕಾರದ ಮೊಟ್ಟೆ, ಹಾಲು ವಿತರಣೆ ಯೋಜನೆ ಬಗ್ಗೆ ಶ್ಲಾಘಿಸಿ ವಿದ್ಯಾರ್ಥಿಸ್ನೇಹಿ ಸಿಎಂ ಎಂದು ಪತ್ರ ಬರೆದಿದ್ದ ಆಶಾ ನೆಹರು ಪಾಟೀಲ್ ಎಂಬ ವಿದ್ಯಾರ್ಥಿನಿಯನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ.

- Advertisement -

ಇಂದು ಧಾರವಾಡ ಜಿಲ್ಲೆಗೆ ಸಿಎಂ ಭೇಟಿ ಹಿನ್ನೆಲೆ ವಿಮಾನ ನಿಲ್ದಾಣಕ್ಕೆ ಆಶಾ ಕೂಡ ಆಗಮಿಸಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯನವರು ಆಶಾಗೆ ಶೇಕ್ ಹ್ಯಾಂಡ್ ನೀಡಿ ಅಭಿನಂದಿಸಿದ್ದರು.


9, 10ನೇ ತರಗತಿ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯನವರು ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ನೀಡುವ ಯೋಜನೆ ವಿಸ್ತರಣೆ ಮಾಡಿದ್ದರು. ಇದರಿಂದ ಸಂತಸಗೊಂಡು ಸಿಎಂ ಸಿದ್ದರಾಮಯ್ಯರಿಗೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಮಳಲಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಆಶಾ ನೆಹರು ಪಾಟೀಲ್ ಪತ್ರ ಬರೆದು ಸಿಎಂಗೆ ಅಭಿನಂದನೆ ಸಲ್ಲಿಸಿದ್ದರು. ಜೊತೆಗೆ ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಅಂತ ಮನವಿ ಮಾಡಿದ್ದರು. ಆಶಾಳ ಪತ್ರವನ್ನು ಟ್ವಿಟರ್ ನಲ್ಲಿ ಹಂಚಿಕೊಂಡು ಸಿದ್ದರಾಮಯ್ಯನವರು ಅಭಿನಂದನೆ ತಿಳಿಸಿದ್ದರು.

- Advertisement -


ನಾಡಿನ ಪ್ರತಿ ವಿದ್ಯಾರ್ಥಿಗೂ ಪೌಷ್ಟಿಕ ಆಹಾರ ದೊರಕಬೇಕು, ಯಾರೊಬ್ಬರೂ ಈ ಅವಕಾಶದಿಂದ ವಂಚಿತರಾಗಬಾರದು ಎಂಬ ಸದಾಶಯದೊಂದಿಗೆ ಈ ಮೊದಲು 1 ರಿಂದ 8ನೇ ತರಗತಿಯ ವರೆಗಿನ ಮಕ್ಕಳಿಗೆ ವಿತರಿಸಲಾಗುತ್ತಿದ್ದ ಮೊಟ್ಟೆಯನ್ನು ನಮ್ಮ ಸರ್ಕಾರವು 9 ಮತ್ತು 10ನೇ ತರಗತಿಗೂ ವಿಸ್ತರಿಸಿದೆ. ನಮ್ಮ ಈ ವಿದ್ಯಾರ್ಥಿಸ್ನೇಹಿ ನಿರ್ಧಾರದ ಬಗ್ಗೆ ಆಶಾ ನೆಹರು ಪಾಟೀಲ್ ಎಂಬ ಪುಟ್ಟ ಬಾಲಕಿಯೊಬ್ಬಳು ನನಗೆ ಪತ್ರ ಬರೆದು ತನ್ನ ಸಂತಸ ಹಂಚಿಕೊಂಡಿದ್ದಾಳೆ ಮಾತ್ರವಲ್ಲ, ಇಂತಹ ಕಾರ್ಯಕ್ರಮಗಳನ್ನು ನೀಡುತ್ತಿರುವ ತಾವು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಅಕ್ಕರೆಯಿಂದ ಸಲಹೆ ನೀಡಿದ್ದಾಳೆ. ಪುಟ್ಟ ಬಾಲಕಿಯ ಪತ್ರವು ಈ ಯೋಜನೆಯನ್ನು ರೂಪಿಸಿ ಜಾರಿಗೊಳಿಸಿದ ನನ್ನ ಉದ್ದೇಶವನ್ನು ಸಾರ್ಥಕವಾಗಿಸಿತು. ಇಂಥ ಮುಗ್ಧ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವುದು ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಶಾಂತಿ, ಸೌಹಾರ್ದತೆಯ ಸಮೃದ್ಧ ಕರ್ನಾಟಕ ನಿರ್ಮಾಣದ ನನ್ನ ಸಂಕಲ್ಪಕ್ಕೆ ಈ ದಿನ ಇನ್ನಷ್ಟು ಬಲ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ಬರೆದುಕೊಂಡಿದ್ದರು.



Join Whatsapp