ಬೆಂಗಳೂರು: ಜನಪ್ರತಿನಿಧಿಗಳ ಕೋರ್ಟ್ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ಮಾಡಿದೆ. ಆದೇಶ ಪ್ರತಿ ತಲುಪಿದ ತಕ್ಷಣ ಮೈಸೂರು ಲೋಕಾಯುಕ್ತ ಪೊಲೀಸರು ಎಫ್ ಐಆರ್ ದಾಖಲಿಸಿ ತನಿಖೆ ಪ್ರಾರಂಭಿಸಬೇಕಾಗುತ್ತದೆ. ತಕ್ಷಣವೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರು ಸಿಎಂ ಆಗಿದ್ದಾಗ ಆರೋಪ ಬಂದಾಗ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಏನ್ ಹೇಳಿದ್ದರು ಎಂಬುದನ್ನು ಅವರು ನೆನಪು ಮಾಡಿಕೊಳ್ಳಬೇಕು. ಯಡಿಯೂರಪ್ಪನವರ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ ಮಾಡಿದ್ದರು. ಪಾರದರ್ಶಕ ತನಿಖೆ ನಡೆಬೇಕಾದರೆ ಆರೋಪಿತ ವ್ಯಕ್ತಿ ಅಧಿಕಾರದಲ್ಲಿ ಇರಬಾರದು. ಆರೋಪಿ ಸಿಎಂ ಸ್ಥಾನದಲ್ಲಿರುವಾಗ ಪಾರದರ್ಶಕ ತನಿಖೆ ನಡೆಯಲು ಸಾಧ್ಯವಿಲ್ಲ. ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ತನಿಖೆಗೆ ಸಹಕಾರ ನೀಡಲು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದರು.
ಮುಖ್ಯಮಂತ್ರಿಗಳ ತವರು ಜಿಲ್ಲೆಯ ಪೊಲೀಸರಿಂದ ನ್ಯಾಯಬದ್ಧ ತನಿಖೆ ಅಸಾಧ್ಯ. ಈ ಪ್ರಕರಣದ ತನಿಖೆಯನ್ನು ಸಿಬಿಐ ಮಾಡಬೇಕು. ಸಿಬಿಐ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ ಮಾಡಬೇಕು. ಹಾಗೆ ಮಾಡಿದರೆ ಸಿದ್ದರಾಮಯ್ಯ ಅವರಿಗೂ ಗೌರವ ಬರುತ್ತೆ. ಮುಡಾ ನಿವೇಶನ ಹಂಚಿಕೆಯಲ್ಲಿ ದೊಡ್ಡ ಹಗರಣ ನಡೆದಿದೆ, ೧೪ ಸೈಟ್‌ಗಳಿಗೆ ಸೀಮಿತವಾಗಿಲ್ಲ.ಹೀಗಾಗಿ ಸಿಬಿಐ ತನಿಖೆ ನಡೆಯಬೇಕು ಎಂದರು.
ನಾಳೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಹೇಳಿದ್ದಾರೆ.