Home ಟಾಪ್ ಸುದ್ದಿಗಳು ತಾಲ್ಲೂಕು-ಜಿಲ್ಲಾ ಆಸ್ಪತ್ರೆಗಳಲ್ಲಿ MRI ಮತ್ತು ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸದ್ದಕ್ಕೆ ಗರಂ ಆದ ಮುಖ್ಯಮಂತ್ರಿ

ತಾಲ್ಲೂಕು-ಜಿಲ್ಲಾ ಆಸ್ಪತ್ರೆಗಳಲ್ಲಿ MRI ಮತ್ತು ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸದ್ದಕ್ಕೆ ಗರಂ ಆದ ಮುಖ್ಯಮಂತ್ರಿ

ಬೆಂಗಳೂರು : ರಾಷ್ಟ್ರೀಯ ಆರೋಗ್ಯ ಅಭಿಯಾನದ ಉದ್ದೇಶ ಸಮರ್ಪಕವಾಗಿ ಜಾರಿಯಾಗದೆ ತಜ್ಞ ವೈದ್ಯರ ಕೊರತೆ ಮತ್ತು ಎಂಆರ್ ಐ ಹಾಗೂ ಡಯಾಲಿಸಿಸ್ ಯಂತ್ರಗಳನ್ನು ತಾಲ್ಲೂಕಾ ಆಸ್ಪತ್ತೆಗಳಲ್ಲಿ ಸಮರ್ಪಕವಾಗಿ ಅಳವಡಿಸದಿರುವುದಕ್ಕೆ ಮುಖ್ಯಮಂತ್ರಿಗಳು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.


ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಭಿಯಾನದ ಕೊರತೆಗಳನ್ನು ಗುರುತಿಸಿ ಮುಂದಿನ ಸಭೆ ವೇಳೆಗೆ ಲೋಪಗಳನ್ನು ಸರಿಪಡಿಸಿರಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಆರೋಗ್ಯ ಸೇವೆಯ ಲಭ್ಯತೆ ಕುರಿತಂತೆ ಪ್ರತ್ಯೇಕವಾಗಿ ಪ್ರಗತಿ ಪರಿಶೀಲನೆ ನಡೆಸಿದರು.
ರಾಷ್ಟ್ರೀಯ ಆರೋಗ್ಯ ಮಿಷನ್ ನ ಅನುದಾನ ಸಕಾಲದಲ್ಲಿ ವೆಚ್ಚವಾಗದಿರುವುದನ್ನು ಗುರುತಿಸಿದರು. ಬಳಿಕ, ರಾಷ್ಟ್ರೀಯ ಆರೋಗ್ಯ ಮಿಷನ್ ನಡಿ ಆರೋಗ್ಯ ವ್ಯವಸ್ಥೆ ಬಲಪಡಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು. ಈ ಯೋಜನೆಯಡಿ ಶೇ. 52 ರಷ್ಟು ತಜ್ಞ ವೈದ್ಯರ ಕೊರತೆ ಇದೆ, ಶೇ. 31 ರಷ್ಟು ಎಂಬಿಬಿಎಸ್ ವೈದ್ಯರ ಕೊರತೆ ಹಾಗೂ ಶೆ. 18 ರಷ್ಟು ನರ್ಸ್ ಸಿಬ್ಬಂದಿ ಕೊರತೆ ಇರುವುದನ್ನು ಗಮನಿಸಿದ ಮುಖ್ಯಮಂತ್ರಿಗಳು, ಇವರಿಗೆ ವೇತನ ಹೆಚ್ಚಳ ಮಾಡುವ ಬಗ್ಗೆ ಪರಿಶೀಲಿಸಿ, ಈ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.


ನಿರಂತರವಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಪ್ರಗತಿ ಪರಿಶೀಲನೆ ಮಾಡಬೇಕು. ನಿಗದಿತ ಗುರಿ ಸಾಧನೆಯನ್ನು ಖಾತರಿ ಪಡಿಸಬೇಕು ಹಾಗೂ ಅನುದಾನ ಸಕಾಲದಲ್ಲಿ ವೆಚ್ಚ ಮಾಡಬೇಕು ಎಂದು ಮುಖ್ಯಮಂತ್ರಿಗಳು ಇಲಾಖೆಯ ಆಯುಕ್ತರಿಗೆ ಸೂಚಿಸಿದರು.
ಕಳೆದ ಒಂದು ವರ್ಷದಲ್ಲಿ ನಿಗಮಕ್ಕೆ 5 ಎಂ.ಡಿ. ನೇಮಕ ಮಾಡಿರುವುದರಿಂದ ಸಮಸ್ಯೆ ಆಗಿರುವುದನ್ನು ಅಧಿಕಾರಿಗಳಿಂದ ಕೇಳಿ ತಿಳಿದ ಮುಖ್ಯಮಂತ್ರಿಗಳು, ನಮ್ಮ ಸರ್ಕಾರದ ಅವಧಿಯಲ್ಲಿ ಈ ರೀತಿ ಆಗುವುದಿಲ್ಲ ಎಂದು ಭರವಸೆ ನೀಡಿದ್ದಲ್ಲದೆ, ನಿಗಮದ ವ್ಯವಸ್ಥಾಪಕ ನಿರ್ದೇಶಕರು ಕನಿಷ್ಠ 2 ವರ್ಷ ಸೇವೆ ಸಲ್ಲಿಸಬೇಕು ಎಂದು ಸೂಚಿಸಿದರು.
ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ಎಂ.ಆರ್.ಐ. ಸ್ಕ್ಯಾನಿಂಗ್ ಹಾಗೂ ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಬೇಕು ಹಾಗೂ ಈ ಎಲ್ಲ ಸೇವೆಗಳನ್ನು ಒದಗಿಸಲು ತಂತ್ರಜ್ಞರನ್ನು ನೇಮಕ ಮಾಡಬೇಕು ಎಂದು ಸೂಚಿಸಿದರು.


ಸರ್ಕಾರಿ ಆಸ್ಪತ್ರೆಗಳಲ್ಲಿ ಬಡಜನರಿಗೆ ಈ ವಿಶೇಷ ಸೇವೆಗಳನ್ನು ಒದಗಿಸದಿದ್ದರೆ ಅವರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಹೇಗೆ ಸಾದ್ಯ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಮೂರು ತಿಂಗಳಲ್ಲಿ ವ್ಯವಸ್ಥೆ ಸರಿಪಡಿಸಬೇಕು. ಸರ್ಕಾರಿ ಆಸ್ಪತ್ರೆಗಳಿಗೆ ಜನ ಬರಬೇಕು.
ಮೂರು ತಿಂಗಳಲ್ಲಿ ಮತ್ತೊಮ್ಮೆ ಪರಿಶೀಲನೆ ನಡೆಸುತ್ತೇನೆ. ಇದೇ ಪರಿಸ್ಥಿತಿ ಮುಂದುವರೆದರೆ ಅಧಿಕಾರಿಗಳೇ ಜವಾಬ್ದಾರರು ಎಂದು ಎಚ್ಚರಿಸಿದರು.
ಗ್ರಾಮೀಣ ಪ್ರದೇಶದಲ್ಲಿ ವೈದ್ಯರಿಗೆ ಕಟ್ಟಿಸಿರುವ ವಸತಿಗೃಹದಲಿ ಯಾವ ವೈದ್ಯರೂ ಉಳಿದುಕೊಳ್ಳುತ್ತಿಲ್ಲ. ಈ ಲೋಪ ಸರಿಪಡಿಸುವಂತೆ ಆಯುಕ್ತರಿಗೆ ಸೂಚಿಸಿದರು.


ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯಕ್ಷಮತೆ ಬಳಿಕ ಸಿಎಂ ಕೊಟ್ಟ ಸೂಚನೆಗಳು

  1. ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆಯು Assurance Mode ನಲ್ಲಿದೆ. ತಮಿಳುನಾಡು ಹಾಗೂ ರಾಜಸ್ಥಾನದಲ್ಲಿ ಜಾರಿಯಲ್ಲಿರುವ ಇನ್ಷೂರೆನ್ಸ್ ಮಾದರಿಯನ್ನು ಅಧ್ಯಯನ ಮಾಡಿ ವರದಿ ಕೊಡಬೇಕು ಎಂದರು.
  2. ಪ್ರಗತಿ ಪರಿಶೀಲನೆ ಮಾಡಿ, ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಸೂಚಿಸಿದರು.
  3. ಮನುಷ್ಯರಿಗೆ ಸಹಾಯ ಮಾಡಬೇಕು ಆಗ ನಾವೂ ಮನುಷ್ಯರಾಗ್ತೀವಿ. ರೋಗಿಗಳಿಗೆ ಕಾಯಿಲೆ ವಾಸಿ ಮಾಡಲು ನಮ್ಮ ಪ್ರಯತ್ನ ಮಾಡಬೇಕು. ಪಾವತಿಯ ಅವಧಿ 14 ದಿನಕ್ಕೆ ಇಳಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆ ಗಳ ಎಂಪ್ಯಾನೆಲ್ ಮೆಂಟ್ ಸುಧಾರಿಸುವ ನಿರೀಕ್ಷೆ ಇದೆ ಎಂದರು.
  4. ಲ್ಯಾಬ್ ಟೆಕ್ನಿಷಿಯನ್ ಮತ್ತಿತರ ಅತಿ ಅಗತ್ಯವಿರುವ ಅರೆ ವೈದ್ಯಕೀಯ ಸಿಬ್ಬಂದಿ ನೇಮಕಕ್ಕೆ ಆದ್ಯತೆ ನೀಡುವಂತೆ ಹಣಕಾಸು ಇಲಾಖೆಗೆ ಸೂಚಿಸಿದರು.
  5. ಔಷಧ ಖರೀದಿ ಪ್ರಕ್ರಿಯೆ ನಿರಂತರವಾಗಿ ನಡೆಯಲು ಅನುವಾಗುವಂತೆ ಎರಡು ವರ್ಷಕ್ಕೊಮ್ಮೆ ಟೆಂಡರ್ ಕರೆಯಲು ಇಲಾಖೆಯು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.

  6. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎನ್. ಜಯರಾಂ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Join Whatsapp
Exit mobile version