ಮಂಗಳೂರು: ಇದೇ ಆ.8ರಿಂದ ಆ.10ರ ವರೆಗೆ ನಗರದ ಬೊಂದೇಲ್ ಬೆಸೆಂಟ್ ವಿದ್ಯಾ ಪರೀಕ್ಷಾ ಕೇಂದ್ರದಲ್ಲಿ ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದಿಂದ ನಡೆಸಲಾಗುವ ಕಂಬೈಂಡ್ ಗ್ರ್ಯಾಜುವೇಟ್ ಲೆವೆಲ್ ಎಕ್ಸಾಮಿನೇಷನ್-2021 ಪರೀಕ್ಷೆ ನಡೆಯಲಿದೆ.
ಈ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಅನುಮಾಗಳಿಗೆ ಆಸ್ಪದವಿಲ್ಲದೇ ಪರೀಕ್ಷೆಯನ್ನು ಸುಲಲಿತವಾಗಿ ನಡೆಸಲು ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ಘಟಕದ ವ್ಯಾಪ್ತಿಯಲ್ಲಿ ರಚಿಸಲಾಗಿರುವ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಸಿಆರ್ ಪಿಸಿಯ ಕಲಂ 144ರ ಪ್ರಕಾರ ಆ.8 ರಿಂದ 10ರ ವರೆಗೆ ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳೂ ಆದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶಿಸಿದ್ದಾರೆ.
ಈ ಅವಧಿಯಲ್ಲಿ ನಿಷೇಧಿತ ಪ್ರದೇಶದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಅಭ್ಯರ್ಥಿಗಳನ್ನು ಹೊರತು ಪಡಿಸಿ ಸಾರ್ವಜನಿಕರು 5 ಅಥವಾ ಅದಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು ಅಥವಾ ತಿರುಗಾಡುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸುವುದು, ಚೀಟಿ ಅಥವಾ ಇನ್ನೀತರ ರೀತಿಯಲ್ಲಿ ಉತ್ತರ ಬರೆದು ಹಂಚುವುದು, ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ, ಪರೀಕ್ಷೆ ಪ್ರಾರಂಭವಾಗುವ ಅರ್ಧಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಜರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ನಿಷೇಧಿಸಲಾಗಿದೆ, ಮೊಬೈಲ್, ದೂರವಾಣಿ, ಪೇಜರ್ ಇತ್ಯಾದಿ ಎಲೆಕ್ಟ್ರಾನಿಕ್ ಸಂಪರ್ಕ ಉಪಕರಣಗಳ ಬಳಕೆ ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.