ಬೆಂಗಳೂರು: ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಮಂಜುನಾಥ್ ಹೆಚ್ ಅವರ ನೇತೃತ್ವದ ನಿಯೋಗವು ಇಂದು ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ಈ ಭರವಸೆ ನೀಡಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ಕೆ.ಇ. ಆರ್.ಸಿ ವಿದ್ಯುತ್ ದರ ಹೆಚ್ಚಳ ಮಾಡಿತ್ತು. ಹೀಗಾಗಿ ಅವರಿಗೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.
ಪೀಣ್ಯಾ ಕೈಗಾರಿಕಾ ಟೌನ್ ಶಿಪ್ ಪ್ರಾಧಿಕಾರ ಸ್ಥಾಪನೆ, ಕೆಐಎಡಿಬಿ ಕೈಗಾರಿಕಾ ಪ್ರದೇಶದ ಮೂಲಭೂತ ಸೌಕರ್ಯ ಸೇರಿದಂತೆ ಇನ್ನಿತರ ಬೇಡಿಕೆಗಳ ಬಗ್ಗೆ ಪರಿಶೀಲಿಸಿದ ನಂತರ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಸಂಘದ ಉಪಾಧ್ಯಕ್ಷ ಶಿವಕುಮಾರ್, ಕಾರ್ಯದರ್ಶಿ ಚಂದ್ರಶೇಖರ್, ಜಂಟಿ ಕಾರ್ಯದರ್ಶಿ ಹೆಚ್.ಕೆ.ಮಲ್ಲೇಶ್, ಗೌಡ, ಖಜಾಂಚಿ ತಿಪ್ಪೇಶಪ್ಪ ಬಿ.ಸಿ ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕ ಲೇಖಕಿಯರ ಸಂಘಕ್ಕೆ 1 ಕೋಟಿ ರೂಪಾಯಿ ವಿಶೇಷ ಅನುದಾನ: ಮುಖ್ಯಮಂತ್ರಿಗೆ ಮನವಿ ಮಾಡಿದ ನಿಯೋಗ
ರಾಜ್ಯದಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಕರ್ನಾಟಕ ಲೇಖಕಿಯರ ಸಂಘದ ಕಾರ್ಯ ಚಟುವಟಿಕೆಗಳಿಗೆ ಒಂದು ಕೋಟಿ ರೂಪಾಯಿ ವಿಶೇಷ ಅನುದಾನ ನೀಡಬೇಕು ಎಂದು ಸಂಘದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.
ಸಂಘದ ಅಧ್ಯಕ್ಷೆ ಹೆಚ್.ಎಲ್.ಪುಷ್ಪ ಅವರ ನೇತೃತ್ವದ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಹಲವು ಮಹತ್ವದ ಸಂಗತಿಗಳನ್ನು ಚರ್ಚಿಸಿ ತಮ್ಮ ಬೇಡಿಕೆಗಳನ್ನು ಮಂಡಿಸಿದೆ.
ವಿಶೇಷ ಅನುದಾನದ ಜತೆಗೆ ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ಅರ್ಹ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು, ‘ನನ್ನ ಕವಿತೆ-ನನ್ನ ಹಾಡು” ಯೋಜನೆಯ ಹಣವನ್ನು ಬಿಡುಗಡೆ ಮಾಡಲು ಸೂಚಿಸಬೇಕು ಎನ್ನುವುದೂ ಸೇರಿ ಹಲವು ಹಕ್ಕೊತ್ತಾಯಗಳನ್ನು ಮುಖ್ಯಮಂತ್ರಿಗಳ ಬಳಿ ಮಂಡಿಸಿದ್ದಾರೆ.
ನಿಯೋಗದಲ್ಲಿ ವಸುಂಧರಾ ಭೂಪತಿ, ಎಂ.ಎಸ್.ಆಶಾದೇವಿ, ಬಿ.ಟಿ.ಲಲಿತಾನಾಯಕ್ ಸೇರಿ ಹಲವು ಲೇಖಕಿಯರು ಉಪಸ್ಥಿತರಿದ್ದರು.