ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಸಿದ್ದರಾಮಯ್ಯ ಸಂಪುಟದ ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ.
ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (KIADB) ಭೂಮಿಯನ್ನು ಎಂಬಿ ಪಾಟೀಲರು ಕಾನೂನು ಬಾಹಿರವಾಗಿ ಹಂಚಿಕೆ ಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಆರೋಪಿಸಿದ್ದು, ಈ ಸಂಬಂಧ ಸಚಿವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಇಂದು (ಆಗಸ್ಟ್ 23) ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಎಂಬಿ ಪಾಟೀಲ್ ಅವರು ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (KIADB) ಭೂಮಿಯನ್ನು ಕಾನೂನು ಬಾಹಿರವಾಗಿ ಹಂಚಿಕೆ ಮಾಡಿದ್ದಾರೆ. ನಿಯಮದ ಪ್ರಕಾರ ಆನ್ ಲೈನ್ ನಲ್ಲಿ ಪ್ರಕ್ರಿಯೆ ನಡೆಸಬೇಕಿತ್ತು. ಆದರೆ ಇವರು ಕೈಗಾರಿಕೆ ನಡೆಸದ ಕಂಪನಿಗಳಿಗೆ ಹಂಚಿಕೆ ಮಾಡಿದ್ದಾರೆ. ಬಿಡದಿ, ವಸಂತನರಸಾಪುರ, ಕೋಲಾರ ನರಸಾಪುರ, ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶಗಳಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ಎಸಗಲಾಗಿದೆ. ಕಾನೂನು ಬಾಹಿರವಾಗಿ ನಿಯಮಗಳನ್ನು ಗಾಳಿಗೆ ತೂರಿ ನಿವೇಶನ ಹಂಚಿಕೆ ಮಾಡಲಾಗಿದೆ . ಇವರ ಕೆಲಸಗಳಿಗೆ ಕೆಲ ಅಧಿಕಾರಿಗಳು ಸಾಥ್ ನೀಡಿದ್ದಾರೆ. ಈ ಅಕ್ರಮ ಹಂಚಿಕೆಯಿಂದ ಕೆಐಎಡಿಬಿಗೆ ಕೋಟ್ಯಂತರ ರೂ. ನಷ್ಟವಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.