ದೌರ್ಜನ್ಯಗಳನ್ನು ಮೌನವಾಗಿಯೇ ಎದುರಿಸುವುದು ಯಾವುದೇ ಸಮಾಜದ ಒಳ್ಳೆಯ ಲಕ್ಷಣವಲ್ಲ: ನ್ಯಾ.ಎಸ್. ಅಬ್ದುಲ್ ನಝೀರ್

Prasthutha|

ಮಂಗಳೂರು: ಸಮಸ್ಯೆ ಅಥವಾ ದೌರ್ಜನ್ಯಗಳನ್ನು ಮೌನವಾಗಿಯೇ ಎದುರಿಸುವುದು ಯಾವುದೇ ಸಮಾಜದ ಒಳ್ಳೆಯ ಲಕ್ಷಣವಲ್ಲ, ಇಂತಹ ಸ್ಥಿತಿಗಳಲ್ಲಿ ನೆರವು ನೀಡಲು ಕಾನೂನು ಸೇವಾ ಪ್ರಾಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ನ ನ್ಯಾಯಾಧೀಶ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಹೇಳಿದ್ದಾರೆ.

- Advertisement -

ಅವರು ಗುರುವಾರ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮೂಡಬಿದ್ರಿ ವಕೀಲರ ಸಂಘ ಹಾಗೂ ಮೂಡಬಿದ್ರಿ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಮೂಡಬಿದ್ರಿಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾನೂನು ಸೇವಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಸಮಸ್ಯೆಗಳು ಅಥವಾ ದೌರ್ಜನ್ಯಗಳ ಇತ್ಯರ್ಥಕ್ಕಾಗಿ ಪೊಲೀಸ್ ಠಾಣೆ ಅಥವಾ ನ್ಯಾಯಾಲಯಕ್ಕೆ ಬಾರದೇ ಅವುಗಳನ್ನು ಮೌನವಾಗಿಯೇ ಎದುರಿಸುವುದು ಕಠೋರ ಸ್ಥಿತಿ. ಅದು ಯಾವುದೇ ನಾಗರೀಕ ಸಮಾಜಕ್ಕೆ ಶೋಭೆ ತರುವುದಿಲ್ಲ. ಇಂತಹ ಸನ್ನಿವೇಶದಲ್ಲಿ ನೊಂದವರಿಗೆ, ತಮ್ಮ ಹಕ್ಕುಗಳಿಗಾಗಿ ಹೋರಾಡಲು ಶಕ್ತಿ ಇಲ್ಲದವರಿಗೆ ಕಾನೂನು ಸೇವಾ ಪ್ರಾಧಿಕಾರ ನೆರವಿಗೆ ನಿಂತು ಕಾನೂನಿನ ಅರಿವು ನೀಡುತ್ತದೆ, ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.

- Advertisement -

ಇದೇ ಡಿ.18ರಂದು ರಾಜ್ಯಾದ್ಯಂತ ನಡೆದ ಮೆಗಾ ಲೋಕ್ ಅದಾಲತ್ನಲ್ಲಿ 3.36 ಲಕ್ಷ ಪ್ರಕರಣಗಳು ಇತ್ಯರ್ಥಗೊಂಡಿವೆ. ಅದರ ಲಾಭವೆಂದರೆ ಅಲ್ಲಿ ಇತ್ಯರ್ಥವಾದ ಪ್ರಕರಣಗಳ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲ. ಅದೇ ಅಚಿತಿಮ. ಕಾನೂನು ಸೇವಾ ಪ್ರಾಧಿಕಾರಗಳ ಆಶ್ರಯದಲ್ಲಿ ಕೈಗೊಳ್ಳಲಾಗುತ್ತಿರುವ ಕ್ರಮಗಳಿಂದಾಗಿ ಇದು ಸಾಧ್ಯವಾಗಿದೆ ಎಂದರು.
ಪ್ರಾರಂಭದಲ್ಲಿ ತುಳುವಿನಲ್ಲಿ ಮಾತನಾಡಿದ ನ್ಯಾಯಮೂರ್ತಿಗಳು ಸಭೆಯಲ್ಲಿ ಹಾಜರಿದ್ದ ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿ ಇದು ಕಾನೂನು ಶಿಬಿರ ಅಲ್ಲ; ಶಿಸ್ತಿನ ಶಿಬಿರ. ಬಹುಶಃ ಈ ಶಿಸ್ತಿನ ಶಿಬಿರಕ್ಕೆ ಮೂಲ ಕಾರಣ ಆಳ್ವಾಸ್ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ಡಾ. ಮೋಹನ್ ಆಳ್ವ ಎಂದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಹೈಕೋರ್ಟ್ನ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ನ್ಯಾ. ಬಿ. ವೀರಪ್ಪ, ಬೆಂಗಳೂರಿನ ರಾಜ್ಯ ಹೈಕೋರ್ಟ್ನ ರಿಜಿಸ್ಟ್ರಾರ್ ಜನರಲ್ ಟಿ.ಜಿ. ಶಿವಶಂಕರೇಗೌಡ, ಬೆಂಗಳೂರಿನ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಚ್. ಶಶಿಧರ ಶೆಟ್ಟಿ, ಮೂಡಬಿದ್ರಿ ವಕೀಲರ ಸಂಘದ ಅಧ್ಯಕ್ಷ ಎಂ. ಸುಬ್ರಹ್ಮಣ್ಯ ತಂತ್ರಿ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ಅವರು ಮಾತನಾಡಿದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮುರಳಿಧರ ಪೈ. ಬಿ ಅವರು ಸ್ವಾಗತಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪೃಥ್ವಿರಾಜ್ ವರ್ಣೇಕರ್ ವಂದಿಸಿದರು.
ಶಿಕ್ಷಣ ಸಂತ ಹರೇಕಳ ಹಾಜಬ್ಬ, ವಕೀಲರು, ವಕೀಲರ ಸಂಘದ ಪದಾಧಿಕಾರಿಗಳು, ರೈತರು, ಸಾರ್ವಜನಿಕರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳ ವತಿಯಿಂದ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು.

Join Whatsapp