ಬೆಂಗಳೂರು: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆಬಾವಿಗೆ ಬಿದಿದ್ದ ಮಗು ಸಾತ್ವಿಕ 20 ಗಂಟೆ ಅನ್ನ, ನೀರು, ಗಾಳಿ-ಬೆಳಕು ಇಲ್ಲದೇ ಪವಾಡ ಸದೃಶ್ಯವೆಂಬಂತೆ ಬದುಕಿದ್ದಾನೆ. ರಕ್ಷಣಾ ಕಾರ್ಯಾಚರಣೆ ಯಶಸ್ವಿ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸಾತ್ವಿಕ್ ನನ್ನ ಕಾಪಾಡಿದ ರಕ್ಷಣಾ ತಂಡಕ್ಕೆ ಅಭಿನಂದನೆ ತಿಳಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆ ಪ್ರಶಂಸನೀಯ ಎಂದಿದ್ದಾರೆ.
ಮಗುವಿನ ಕುಟುಂಬದವರ, ನಾಡಿನ ಕೋಟ್ಯಂತರ ಜನರ ಹರಕೆ – ಹಾರೈಕೆಗಳು ಫಲಿಸಿದೆ, ಸಾವನ್ನೇ ಗೆದ್ದು ಬಂದ ಪುಟ್ಟ ಕಂದಮ್ಮ ಮತ್ತೆ ಪೋಷಕರ ಮಡಿಲು ಸೇರಿದ್ದು ಕಂಡು ಖುಷಿಯಾಯಿತು ಎಂದರು.
ನೀರು ಬಾರದ ಅಥವಾ ಬತ್ತಿದ ಕೊಳವೆ ಬಾವಿಗಳನ್ನು ಮುಚ್ಚದಿದ್ದರೆ ಯಾರದೋ ಅಮಾಯಕ ಜೀವ ಬಲಿಯಾಗುತ್ತದೆ, ಇಂತಹ ಘಟನೆಗಳು ಕಾಲಕಾಲಕ್ಕೆ ಪುನರಾವರ್ತನೆಯಾಗುತ್ತಿದ್ದರೂ ಜನ ಜಾಗೃತರಾಗದೆ ನಿರ್ಲಕ್ಷ್ಯ ತೋರುವುದು ಬೇಸರದ ಸಂಗತಿ. ಸಮಾಜ ಈ ಬಗ್ಗೆ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು ಎಂದು ಜನರಿಗೆ ಸಂದೇಶ ನೀಡಿದ್ದಾರೆ.