ದಾವಣಗೆರೆ: ರಾಜ್ಯಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಲಿಂಗಾಯತ ಸಮುದಾಯದವರಿಗೆ ಹೆಚ್ಚಿನ ಟಿಕೆಟ್ ನೀಡಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕರೂ ಆಗಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ ಮಾತ್ರವಲ್ಲ, ಬಿಜೆಪಿ ಹೈಕಮಾಂಡ್ ಗೂ ಪತ್ರ ಬರೆದಿದ್ದಾರೆ.
ರಾಜ್ಯಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ವೀರಶೈವ ಲಿಂಗಾಯತ ಸಮುದಾಯದ ನಾಯಕರಿಗೆ ಹೆಚ್ಚಿನ ಟಿಕೆಟ್ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ.
ಈ ಬಗ್ಗೆ ದಾವಣಗೆರೆಯಲ್ಲಿ ಮಾತನಾಡಿದ ಶಾಮನೂರು ಶಿವಶಂಕರಪ್ಪ, ಬರುವ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವೀರಶೈವ ಲಿಂಗಾಯತರಿಗೆ ಟಿಕೆಟ್ ನೀಡಬೇಕು. ಈ ಬಗ್ಗೆ ಎರಡು ರಾಷ್ಟ್ರೀಯ ಪಕ್ಷಗಳ ಅಧ್ಯಕ್ಷರಿಗೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದರು.
ರಾಜ್ಯಸಭೆಯಲ್ಲಿ ಮೂರು ಸ್ಥಾನಗಳು ಕಾಂಗ್ರೆಸ್ ಗೆ ದೊರೆಯಲಿವೆ. ಈ ಮೂರು ಸ್ಥಾನಗಳಲ್ಲಿ ಒಂದು ಸ್ಥಾನ ವೀರಶೈವ ಲಿಂಗಾಯತ ಸಮುದಾಯದವರಿಗೆ ನೀಡಬೇಕು. ಲೋಕಸಭೆ ಚುನಾವಣೆಯಲ್ಲಿ ಸಮುದಾಯದ ಜನಸಂಖ್ಯೆ ಅನುಗುಣವಾಗಿ ವೀರಶೈವ ಲಿಂಗಾಯತರಿಗೆ ಆಧ್ಯತೆ ನೀಡಬೇಕು ಎಂದು ಶಾಮನೂರು ಶಿವಶಂಕರಪ್ಪ ಅವರು ಪತ್ರದ ಮೂಲಕ ಒತ್ತಾಯಿಸಿದ್ದಾರೆ.