ಕೋಮು ಸೌಹಾರ್ದ ಕದಡುವ ಹೇಳಿಕೆ | ಸಂಸದ ತೇಜಸ್ವಿ ಸೂರ್ಯ ಮತ್ತು ತಂಡದ ವಿರುದ್ಧ ಕಾಂಗ್ರೆಸ್ ದೂರು

Prasthutha|

ಬೆಂಗಳೂರು : ಕೋಮು ಸೌಹಾರ್ದ ಕದಡುವ ಹೇಳಿಕೆ ನೀಡಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ಶಾಸಕರುಗಳಾದ ರವಿ ಸುಬ್ರಹ್ಮಣ್ಯ, ಉದಯ್ ಗರುಡಾಚಾರ್ ಮತ್ತು ಸತೀಶ್ ರೆಡ್ಡಿ ವಿರುದ್ಧ ಕಾನುನು ಕ್ರಮಕ್ಕೆ ಆಗ್ರಹಿಸಿ ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಸಮಿತಿ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

- Advertisement -

ಬೆಂಗಳೂರು ದಕ್ಷಿಣ ವಿಭಾಗದ ಕೋವಿಡ್ ವಾರ್ ರೂಂನಲ್ಲಿ ಬೆಡ್ ಬ್ಲಾಕಿಂಗ್ ಹಗರಣವಾಗುತ್ತಿದೆ ಎಂದು ಹೇಳಿ ಸಂಸದ ತೇಜಸ್ವಿ ಸೂರ್ಯ, ಶಾಸಕರುಗಳಾದ ರವಿ ಸುಬ್ರಹ್ಮಣ್ಯ, ಉದಯ್ ಗರುಡಾಚಾರ್ ಮತ್ತು ಸತೀಶ್ ರೆಡ್ಡಿ ತಮ್ಮ ಬೆಂಬಲಿಗರೊಂದಿಗೆ ತೆರಳಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಗದ್ದಲ ಮಾಡಿ ಕೋವಿಡ್ ವಾರ್ ರೂಮಿನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ 205 ಜನರಲ್ಲಿ 17 ಜನ ಒಂದು ಕೋಮಿಗೆ ಸೇರಿದ್ದು, ಹೇಗೆ ಕೆಲಸಕ್ಕೆ ತೆಗೆದುಕೊಂಡಿದ್ದೀರಿ ಎಂದು ಪ್ರಶ್ನಿಸಿದ್ದರು.

ಈ ಸಂದರ್ಭದಲ್ಲಿ ಬಸವನಗುಡಿ ವಿಧಾನಸಭಾ ಕ್ಷೇತ್ರದ ಶಾಸಕ ರವಿ ಸುಬ್ರಹ್ಮಣ್ಯ ‘ಇದೇನು ಮದ್ರಸಾ ನಡೆಸುತ್ತಿದ್ದೀರಾ? ಹಜ್ ಯಾತ್ರೆಗೆ ಕಳುಹಿಸುವ ಯೋಜನೆ ಹಾಕಿಕೊಂಡಿದ್ದೀರಾ? ನಮ್ಮ ಮರ್ಯಾದೆ ಹರಾಜು ಆಗುತ್ತಿದೆ’ ಎಂದು ಒಂದು ಸಮುದಾಯದ ವಿರುದ್ಧ ದ್ವೇಷ ಕಾರಿದ್ದಾರೆ. ನಂತರ ಸಂಸದ ತೇಜಸ್ವಿ ಸೂರ್ಯ ಹದಿನೆಳು ಜನರ ಹೆಸರಿನ ಪಟ್ಟಿಯನ್ನು ಪತ್ರಿಕಾಗೋಷ್ಠಿಯಲ್ಲಿ ಉಲ್ಲೇಖಿಸಿ ಸಮಾಜದ ಸಾಮರಸ್ಯ ಕದಡಲು ಪ್ರಚೋದಿಸುವ ದುರುದ್ದೇಶದಿಂದ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ  

Join Whatsapp