ಕೋಲಾರ : ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ನಡೆಯಲಿದ್ದು, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಕಾಣುತ್ತಿರುವ ತಿರುಕನ ಕನಸು ನನಸಾಗುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಗೂಟ ಇಟ್ಟುಕೊಂಡು ಬಡಿದಾಡಬೇಕು ಅಷ್ಟೆ. ಕಾಂಗ್ರೆಸ್ ನ ಶಾಸಕರು ಟೆಂಟ್ ಸಮೇತ ಗಂಟುಮೂಟೆ ಕಟ್ಟಿಕೊಂಡು ಹೊರಬರಲು ತಯಾರಾಗಿದ್ದಾರೆ ಎಂದು ಹೇಳಿದರು.
ಈಗಾಗಲೇ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಸಿ.ಎಂ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿದ್ದು, ಹಲವು ಶಾಸಕರು ಪಕ್ಷಾಂತರಕ್ಕೆ ತಯಾರಾಗಿದ್ದಾರೆ ಎಂದರು.
‘ಬಿಜೆಪಿ ಕಾರ್ಯಕರ್ತರು ಮುಂದಿನ ಚುನಾವಣೆ ವರೆಗೆ ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಕೆಲಸ ಮಾಡಬೇಕು ಎಂದು ಹೇಳಿದರು.