ಹೊಸದಿಲ್ಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ರಾಹುಲ್ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿ ಸ್ಪೀಕರ್ ಕಾರ್ಯಾಲಯ ಆದೇಶ ಹೊರಡಿಸಿದೆ.
ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ತಪ್ಪಿತಸ್ಥನಾಗಿರುವ ರಾಹುಲ್ ಗಾಂಧಿಯವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ನಿನ್ನೆ ಸೂರತ್ ಕೋರ್ಟ್ ತೀರ್ಪು ನೀಡಿತ್ತು. ಅದರ ಬೆನ್ನಲ್ಲೇ ರಾಹುಲ್ ಗಾಂಧಿಯವರು ತಮ್ಮ ಸಂಸದ ಸ್ಥಾನವನ್ನು ಕಳೆದುಕೊಂಡಿದ್ದಾರೆ.
ಜನಪ್ರತಿನಿಧಿಗಳ ಕಾಯ್ದೆ 1951 ಪ್ರಕಾರ 2 ವರ್ಷಗಳ ಜೈಲುಶಿಕ್ಷೆಗೆ ಒಳಪಡುವ ಜನಪ್ರತಿನಿಧಿಗಳು ತಮ್ಮ ಸ್ಥಾನವನ್ನು ಕಳೆದುಕೊಳ್ಳುತ್ತಾರೆ. ರಾಹುಲ್ ಗಾಂಧಿಯವರು 2 ವರ್ಷಗಳ ಜೈಲು ಶಿಕ್ಷೆಗೆ ಒಳಪಟ್ಟಿರುವ ಹಿನ್ನೆಲೆಯಲ್ಲಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಸ್ಪೀಕರ್ ಕಾರ್ಯಾಲಯ ಆದೇಶ ಹೊರಡಿಸಿದೆ.
ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಕೇರಳದ ವಯನಾಡು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಅಮೇಠಿ ಮತ್ತು ವಯನಾಡಿನಲ್ಲಿ ಸ್ಪರ್ಧಿಸಿದ್ದ ರಾಹುಲ್ ಗಾಂಧಿ, ಅಮೇಠಿಯಲ್ಲಿ ಸೋಲುನುಭವಿಸಿದ್ದರು. ವಯನಾಡಿನಲ್ಲಿ ಗೆಲುವು ಸಾಧಿಸಿದ್ದರು.
ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಸಂಸದ ಶಶಿ ತರೂರ್, ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಟೀಕಿಸಿದ್ದಾರೆ.
ಅನರ್ಹಗೊಳಿಸುವ ಹಕ್ಕು ರಾಷ್ಟ್ರಪತಿ ಇಲ್ಲವೇ ಚುನಾವಣಾ ಆಯೋಗಕ್ಕೆ ಸೇರಿದೆ ಎಂದು ಕಾಂಗ್ರೆಸ್ ನಾಯಕ ಮನೀಶ್ ತಿವಾರಿ ಪ್ರತಿಕ್ರಿಯಿಸಿದ್ದಾರೆ.