ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪನವರನ್ನು ಸಂಪುಟದಿಂದ ವಜಾ ಮಾಡುವಂತೆ ಕಾಂಗ್ರೆಸ್ ನಾಯಕರು ಬುಧವಾರ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದಾರೆ.
ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಪ್ರಿಯಾಂಕ್ ಖರ್ಗೆ , ಕೆ.ಜೆ. ಜಾರ್ಜ್ ಸೇರಿದಂತೆ 20 ನಾಯಕರ ನಿಯೋಗ ರಾಜಭವನಕ್ಕೆ ಭೇಟಿಕೊಟ್ಟು ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದೆ.
ಕಾಂಗ್ರೆಸ್ ರಾಜ್ಯಪಾಲರಿಗೆ ನೀಡಿರುವ ಮನವಿಯಲ್ಲಿ, ಬೆಳಗಾವಿ ಜಿಲ್ಲೆಯ ಸಂತೋಷ ಕೆ.ಪಾಟೀಲ್ ಅವರು ಓರ್ವ ಗುತ್ತಿಗೆದಾರ ಮತ್ತು ಹಿಂದೂ ವಾಹಿನಿಯ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದರು. ಇವರು ದಿನಾಂಕ 12-04-2022 ರಂದು ಉಡುಪಿಯ ಶಾಂಭವಿ ಹೊಟೇಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ತಮ್ಮ ಸಾವಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರೇ ನೇರ ಹೊಣೆ ಎಂದು ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಆತ್ಮಹತ್ಯೆಗೆ ಸಂದೇಶ ರವಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಈ ಹಿನ್ನೆಲೆಯಲ್ಲಿ ಸಚಿವರು ಆತ್ಮಹತ್ಯೆಗೆ ನೇರ ಹೊಣೆಯಾಗಿದ್ದು ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಲಾಗಿದೆ.