ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಆರಂಭವಾದ ವಿಧಾನಮಂಡಲ ಚಳಿಗಾಲದ ಅಧಿವೇಶನ ಮೊದಲ ದಿನವಾದ ಸೋಮವಾರ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮೂಲಕ ಆಗಮಿಸಿದ್ದಾರೆ.
ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಖಾನಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ನಡೆಸಿದ ಪಾದಯಾತ್ರೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪಾಲ್ಗೊಂಡು ಸರ್ಕಾರದ ವಿರುದ್ಧ ಹರಿಹಾಯ್ದರು.
ಅಂಜಲಿ, ಭಾನುವಾರ ಖಾನಾಪುರದಿಂದ ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಪಾದಯಾತ್ರೆ ಆರಂಭಿಸಿದ್ದರು. ತಾಲ್ಲೂಕಿನ ಯಳ್ಳೂರಿನಿಂದ ಬೆಳಿಗ್ಗೆ ಪಾದಯಾತ್ರೆ ಮುಂದುವರಿಸಿದ್ದರು. ಅಲಾರವಾಡ ಕ್ರಾಸ್ ಬಳಿ ಅವರೊಂದಿಗೆ ಸಿದ್ದರಾಮಯ್ಯ ಹಾಗೂ ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ ಮತ್ತು ಗಣೇಶ ಹುಕ್ಕೇರಿ ಪಾಲ್ಗೊಂಡು ಬೆಂಬಲ ಸೂಚಿಸಿದರು. ಬಳಿಕ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಕೂಡ ಭಾಗಿಯಾದರು. ಸುವರ್ಣ ವಿಧಾನಸೌಧ ಸಮೀಪದವರೆಗೂ ಪಾದಯಾತ್ರೆ ನಡೆಸಿದರು.
ಈ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ‘ಖಾನಾಪುರ ಕ್ಷೇತ್ರದಲ್ಲಿ ಅತಿವೃಷ್ಟಿಯಿಂದ ಅಪಾರ ಹಾನಿಯಾಗಿದೆ. ಬಹಳಷ್ಟು ಮಂದಿ ಮನೆ ಕಳೆದುಕೊಂಡಿದ್ದಾರೆ. ಆದರೆ, ಸರ್ಕಾರದ ನಿರ್ಲಕ್ಷ್ಯದ ಪರಿಣಾಮ ಅಲ್ಲಿನ ಶಾಸಕರು ಒಂದು ಮನೆಯನ್ನೂ ಕೊಡಿಸಲು ಸಾಧ್ಯವಾಗಿಲ್ಲ. ಹೀಗಾಗಿ ಹೋರಾಟ ನಡೆಸುತ್ತಿದ್ದಾರೆ. ಇಂತಹ ಸಮಸ್ಯೆಗಳ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರದ ಗಮನಸೆಳೆಯಲಾಗುವುದು. ರಾಜ್ಯದಾದ್ಯಂತ ಸಂತ್ರಸ್ತರಿಗೆ ಹಾಗೂ ರೈತರಿಗೆ ಪರಿಹಾರ ಸಿಕ್ಕಿಲ್ಲ’ ಎಂದು ತಿಳಿಸಿದರು.