Home ಟಾಪ್ ಸುದ್ದಿಗಳು ತವಾಂಗ್ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ

ತವಾಂಗ್ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ

ನವದೆಹಲಿ: ಕಾಂಗ್ರೆಸ್ ನೇತೃತ್ವದ 12 ವಿರೋಧ ಪಕ್ಷಗಳು ಭಾರತ-ಚೀನಾ ಗಡಿ ಉದ್ವಿಗ್ನತೆ ಕುರಿತು ಚರ್ಚೆಗೆ ಒತ್ತಾಯಿಸಿ ಬುಧವಾರ ಸಂಸತ್ತಿನ ಸಂಕೀರ್ಣದಲ್ಲಿರುವ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಿದವು.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಸಿಪಿಐ, ಸಿಪಿಐ-ಎಂ, ಆರ್‌ಜೆಡಿ, ಜೆಡಿಯು, ಶಿವಸೇನೆ, ಡಿಎಂಕೆ ಮತ್ತು ಎನ್‌ಸಿಪಿ ಸೇರಿದಂತೆ ಸುಮಾರು 12 ವಿರೋಧ ಪಕ್ಷಗಳ ಸಂಸದರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದು,  ಚೀನಾದ ಅಕ್ರಮಗಳ ಕುರಿತು ಸಂಸತ್ತಿನಲ್ಲಿ ಕೇಳಲಾದ ಪ್ರಶ್ನೆಗಳಿಗೆ ಸರ್ಕಾರ ಉತ್ತರಿಸಬೇಕು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಈ ಬಗ್ಗೆ ಮೌನ ಮುರಿಯಬೇಕು ಎಂದು ಒತ್ತಾಯಿಸಿದ್ದಾರೆ.

ಡಿಸೆಂಬರ್ 7 ರಂದು ಚಳಿಗಾಲದ ಅಧಿವೇಶನ ಪ್ರಾರಂಭವಾದಾಗಿನಿಂದ ಭಾರತ-ಚೀನಾ ಗಡಿ ಉದ್ವಿಗ್ನತೆ ಮತ್ತು ಇತ್ತೀಚಿನ ಚೀನಾದ ಅತಿಕ್ರಮಣಗಳ ಬಗ್ಗೆ ಚರ್ಚಿಸಲು ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ. ಹಲವು ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ಈ ವಿಷಯದ ಬಗ್ಗೆ ಚರ್ಚೆಗೆ ಕೋರಿ ಮುಂದೂಡಿಕೆ ನೋಟಿಸ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Join Whatsapp
Exit mobile version