ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿಯವರು ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಗರ ಮತ್ತು ಗ್ರಾಮಾಂತರ ಜಿಲ್ಲಾ ಸಮಿತಿಯ ಕಾರ್ಯಕರ್ತರು ‘ಮುಡಾ’ ಕಚೇರಿ ಸಮೀಪದ ಜೆಎಲ್‌ಬಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಸಿದ್ದರಾಮಯ್ಯ ಅವರ ಪತ್ನಿ ಕಾನೂನಾತ್ಮಕವಾಗಿ ಪಡೆದ ನಿವೇಶನಗಳ ವಿಚಾರವನ್ನು ತಿರುಚಿದ ಬಿಜೆಪಿಯವರು ಅನಗತ್ಯ ಸಿದ್ದರಾಮಯ್ಯರನ್ನು ತೇಜೋವಧೆ ಮಾಡುತ್ತಿದ್ದಾರೆ. ಸೃಷ್ಟಿಸುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕ್ರಾಫರ್ಡ್ ಭವನದ ಕಡೆಯಿಂದ ಮುಡಾಕ್ಕೆ ಮುತ್ತಿಗೆ ಹಾಕಲು ಬರುತ್ತಿದ್ದ ಬಿಜೆಪಿ ಕಾರ್ಯಕರ್ತರ ಬಳಿಗೆ ತೆರಳಲು ಮುಂದಾದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ, ಕಾಂಗ್ರೆಸ್ ನಗರ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಮೂರ್ತಿ ಹಾಗೂ ಗ್ರಾಮಾಂತರ ಜಿಲ್ಲಾ ಸಮಿತಿ ಅಧ್ಯಕ್ಷ ಬಿ.ಜೆ. ವಿಜಯ್‌ಕುಮಾರ್ ಹಾಗೂ ಕಾರ್ಯಕರ್ತರನ್ನು ಪೊಲೀಸರು ತಡೆದ ಘಟನೆಯೂ ನಡೆದಿದೆ.
ಅಲ್ಲಿ ಪ್ರತಿಭಟಿಸುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದೇವೆ. ನೀವೂ ಪ್ರತಿಭಟನೆ ಹಿಂಪಡೆದು ಸಹಕರಿಸಬೇಕು ಎಂದು ಪೊಲೀಸ್ ಅಧಿಕಾರಿಗಳು ಕೋರಿದರರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವ ಬಿಜೆಪಿಯವರಿಂದ ನಾವು ದಾಖಲೆ ಕೇಳಲೇಬೇಕು. ಅಲ್ಲಿಗೆ ಹೋಗಲು ಬಿಡಿ ಎಂದು ಕಾಂಗ್ರೆಸ್ ಮುಖಂಡರು ಪಟ್ಟು ಹಿಡಿದರು. ಪೊಲೀಸರು ಹಾಗೂ ಪ್ರತಿಭಟನಕಾರರ ನಡುವೆ 45 ನಿಮಿಷಕ್ಕೂ ಹೆಚ್ಚು ಸಮಯ ವಾಗ್ವಾದ ನಡೆದಿದೆ ಬಳಿಕ, ನಗರ ಸಮಿತಿಯ ಅಧ್ಯಕ್ಷರ ಸೂಚನೆ ಮೇರೆಗೆ ಕಾರ್ಯಕರ್ತರು ಅಲ್ಲಿಂದ ತೆರಳಿದ್ದಾರೆ
ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಮನವೊಲಿಕೆಗೆ ಜಗ್ಗದೆ, ಕೆಲಕಾಲ ಜೋರು ಮಳೆಯಲ್ಲೇ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ.