ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೈದ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿಗೆ ಸಂಬಂಧಿಸಿ ಈಶ್ವರಪ್ಪನ ವಿರುದ್ದ ಪ್ರಕರಣ ದಾಖಲಿಸಿ ಬಂಧಿಸುವಂತೆ ಆಗ್ರಹಿಸಿ ಸಚಿವ ಈಶ್ವರಪ್ಪ ಮನೆಗೆ ಮುತ್ತಿಗೆಗೆ ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಈಶ್ವರಪ್ಪ ವಿರುದ್ಧ ಘೊಷಣೆ ಮೊಳಗಿಸಿ ಆಕ್ರೋಶ ವ್ಯಕ್ತಪಡಿಸಿದ ಯೂತ್ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಗಾಂಧಿಭವನ ರಸ್ತೆಯಲ್ಲಿರುವ ಸಚಿವ ಈಶ್ವರಪ್ಪರ ಸರ್ಕಾರಿ ನಿವಾಸಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ಹಾರಿಸ್ ನಲಪಾಡ್ ನೇತ್ರತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆಗೆ ಯತ್ನಿಸಿದ್ದಾರೆ. ಕೂಡಲೇ ಪ್ರತಿಭಟನಾಕಾರರನ್ನು ತಡೆದ ಪೊಲೀಸರು ಬಂಧಿಸಿದ್ದಾರೆ.
ಸಚಿವ ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪವನ್ನು ಇತ್ತೀಚೆಗೆ ಸಂತೋಷ್ ಪಾಟೀಲ್ ಹೊರಿಸಿದ್ದರು. ಅಲ್ಲದೇ ಪ್ರಧಾನಿ ಮೋದಿಗೂ ದೂರನ್ನು ನೀಡಿದ್ದರು. ಇದರ ಮಧ್ಯೆ ಇಂದು ಉಡುಪಿಯ ಶಾಂಭವಿ ಲಾಡ್ಜ್’ನಲ್ಲಿ ನನ್ನ ಸಾವಿಗೆ ಸಚಿವ ಕೆ.ಎಸ್. ಈಶ್ವರಪ್ಪ ಅವರೇ ಕಾರಣ. ಸಚಿವರಿಗೆ ಶಿಕ್ಷೆಯಾಗಬೇಕು ಎಂದು ಡೆತ್ ನೋಟ್ ಬರೆದಿಟ್ಟು ಸಂತೋಷ್ ಆತ್ಮಹತ್ಯೆಗೆ ಶರಣಾಗಿದ್ದಾರೆ.