ನವದೆಹಲಿ : ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನಿಂದ ಭಾರತ ಬಚಾವ್ ಆಯ್ತು ಎನ್ನುವಷ್ಟರಲ್ಲೇ ಮತ್ತೆ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆಯು ಶೇ.89.80ರಷ್ಟು ಏರಿಕೆಯಾಗಿದೆ.ದೇಶದಲ್ಲಿ ಒಂದು ದಿನದಲ್ಲಿ 2183 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ.
ಕಳೆದ ಒಂದು ದಿನದಲ್ಲಿ ಕೋವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟವರ ಸಂಖ್ಯೆಯಲ್ಲೂ ಗಣನೀಯ ಏರಿಕೆ ಕಂಡು ಬಂದಿದೆ. ಕೇರಳವೊಂದರಲ್ಲೇ ಒಂದು ದಿನದಲ್ಲಿ ಕೊರೊನಾವೈರಸ್ ಸೋಂಕಿನಿಂದ 212 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಭಾನುವಾರವೊಂದೇ ದಿನದಲ್ಲಿ 214 ಮಂದಿ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಭಾರತದಲ್ಲಿ ಕೊರೊನಾವೈರಸ್ ನಿಯಂತ್ರಿಸುವ ಸಲುವಾಗಿ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಇದುವರೆಗೂ 1,86,54,94,355 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ. ಮೊದಲ ಹಂತ, ಎರಡನೇ ಹಂತ ಮತ್ತು ಮೂರನೇ ಹಂತ ಎಂಬುದಾಗಿ ಹಂತ-ಹಂತವಾಗಿ ಲಸಿಕೆ ವಿತರಣೆ ಅಭಿಯಾನವನ್ನು ಆರಂಭಿಸಲಾಗಿತ್ತು. ಇದೇ ಏಪ್ರಿಲ್ 10ರಿಂದ ಭಾರತದಲ್ಲಿ ಬೂಸ್ಟರ್ ಡೋಸ್ ಲಸಿಕಯನ್ನೂ ಸಹ ವಿತರಿಸಲು ಆರಂಭಿಸಲಾಗಿದೆ.